ಬೆಂಗಳೂರು: ಸಹಪಾಠಿಯಿಂದ ಚಾಕು ಇರಿತ, 19 ವರ್ಷದ ಬಿಕಾಂ ವಿದ್ಯಾರ್ಥಿ ಸಾವು
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸಹಪಾಠಿಯ ಚಾಕು ಇರಿತಕ್ಕೆ ಒಳಗಾದ 19 ವರ್ಷದ ಬಿಕಾಂ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಬೆಂಗಳೂರಿನ (Bengaluru) ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳ ನಡುವಿನ ಗಲಾಟೆ ದುರಂತದಲ್ಲಿ ಅಂತ್ಯಗೊಂಡಿದೆ. ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ಓದುತ್ತಿದ್ದ 19 ವರ್ಷದ ಯೋಗೀಶ್ ಎಂಬ ವಿದ್ಯಾರ್ಥಿ ಚಾಕು ಇರಿತದಿಂದ ಮೃತಪಟ್ಟಿದ್ದಾನೆ.
ಯೋಗೀಶ್ ಕಾಲೇಜಿನಲ್ಲಿ ಉತ್ತಮ ವಿದ್ಯಾರ್ಥಿಯಾಗಿದ್ದಲ್ಲದೆ, ನೃತ್ಯದಲ್ಲೂ ಆಸಕ್ತಿ ಹೊಂದಿದ್ದ ಎಂದು ತಿಳಿದುಬಂದಿದೆ. ಎಂದಿನಂತೆ ಕಾಲೇಜಿಗೆ ಬಂದಿದ್ದ ಆತ ಮಧ್ಯಾಹ್ನದ ವೇಳೆಗೆ ಸಹಪಾಠಿಯೊಬ್ಬನಿಂದ ಕರೆ ಸ್ವೀಕರಿಸಿದ್ದ.
ಹೊರಗೆ ಬಂದು ಮಾತನಾಡುವಂತೆ ಆ ವಿದ್ಯಾರ್ಥಿ ಯೋಗೀಶ್‌ಗೆ ಹೇಳಿದ್ದಾನೆ. ಅದರಂತೆ ಕಾಲೇಜಿನ ಹಿಂಭಾಗದಲ್ಲಿರುವ ಜಿಮ್‌ವೊಂದರ ಬಳಿ ಯೋಗೀಶ್ ತೆರಳಿದ್ದಾನೆ. ಅಲ್ಲಿ ಏಳೆಂಟು ಮಂದಿ ವಿದ್ಯಾರ್ಥಿಗಳು ಸೇರಿದ್ದರು ಎನ್ನಲಾಗಿದೆ.
ಈ ವೇಳೆ ಯೋಗೀಶ್‌ನ ಸ್ನೇಹಿತರು ಮತ್ತು ಮತ್ತೊಂದು ಗುಂಪಿನ ನಡುವೆ ಯಾವುದೋ ವಿಚಾರಕ್ಕೆ ಮಾತಿನ ಚಕಮಕಿ ಆರಂಭವಾಗಿ, ಕೆಲವೇ ಕ್ಷಣಗಳಲ್ಲಿ ಗಲಾಟೆಯಾಗಿ ಮಾರ್ಪಟ್ಟಿದೆ. ಪರಿಸ್ಥಿತಿ ಬಿಗಡಾಯಿಸಿದ ಸಂದರ್ಭದಲ್ಲಿ ಗುಂಪಿನಲ್ಲಿದ್ದ ಓರ್ವ ವಿದ್ಯಾರ್ಥಿ ಚಾಕು ತೆಗೆದು ಯೋಗೀಶ್‌ನ ಎದೆಗೆ ಇರಿದಿದ್ದಾನೆ.
ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ಯೋಗೀಶ್‌ನನ್ನು ಸ್ನೇಹಿತರು ತಕ್ಷಣ ಬೈಕ್‌ನಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗೆ (Private Hospital) ಕರೆದೊಯ್ದಿದ್ದಾರೆ. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆತ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ.
ಘಟನೆ ಕುರಿತು ಮಾಹಿತಿ ಪಡೆದ ಅನ್ನಪೂರ್ಣೇಶ್ವರಿ ನಗರ ಪೊಲೀಸರು (Police) ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಗಳ ನಡುವೆ ಗಲಾಟೆ ಉಂಟಾಗಲು ಕಾರಣವೇನು ಮತ್ತು ಚಾಕು ಇರಿತ ನಡೆಸಿದ ವಿದ್ಯಾರ್ಥಿ ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



