ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೈಕ್‌ಗೆ ಟೆಂಪೋ ಡಿಕ್ಕಿ: ಬಿಇ ವಿದ್ಯಾರ್ಥಿ ಸಾವು
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಮುಂಜಾನೆ ನಡೆದ ಅಪಘಾತದಲ್ಲಿ ಬಿಜಾಪುರ ಮೂಲದ ರೋಹಿತ್ ಮೃತಪಟ್ಟಿದ್ದು, ಬೈಕ್ ಸವಾರ ಹರ್ಷ ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿ ಹೊಡೆದ ಟೆಂಪೋ ಚಾಲಕ ಪರಾರಿಯಾಗಿದ್ದಾನೆ.

ಬೆಂಗಳೂರು (Bengaluru): ಪಾರ್ಟ್‌ಟೈಂ ಕೆಲಸದ ನಿಮಿತ್ತ ವಸ್ತುಗಳನ್ನು ತಲುಪಿಸಲು ತೆರಳುತ್ತಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಬೈಕ್‌ಗೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ, ಹಿಂಬದಿ ಸವಾರನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಅಪಘಾತದ ಬಳಿಕ ವಾಹನ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.
ಮೃತನನ್ನು ಬಿಜಾಪುರ ಮೂಲದ 20 ವರ್ಷದ ರೋಹಿತ್ ಎಂದು ಗುರುತಿಸಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಹರ್ಷ ಎಂಬಾತನ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಬ್ಬರೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದು, ಪೋರ್ಟರ್‌ನಲ್ಲಿ (Porter) ಪಾರ್ಟ್‌ಟೈಂ ಕೆಲಸ ಮಾಡುತ್ತಿದ್ದರು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಖ ಗುರುತು ಸಿಗದಷ್ಟು ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ
ಸೋಮವಾರ ಮುಂಜಾನೆ ಸುಮಾರು 4 ಗಂಟೆಗೆ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ (Electronic City Flyover) ಈ ದುರ್ಘಟನೆ ಸಂಭವಿಸಿದೆ. ವಸ್ತುಗಳ ವಿತರಣೆಗೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಅಪರಿಚಿತ ಟೆಂಪೋ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಇಬ್ಬರೂ ಗಾಯಗೊಂಡಿದ್ದು, ರೋಹಿತ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ದೇವಸ್ಥಾನಗಳಲ್ಲಿ ಕಳವು ಮಾಡುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರು ಅರೆಸ್ಟ್
ಅಪಘಾತದ ಬಳಿಕ ಟೆಂಪೋ ಚಾಲಕ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಾಳು ಹರ್ಷನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಕಾರಣವಾದ ವಾಹನ ಮತ್ತು ಅದರ ಚಾಲಕನ ಪತ್ತೆಗಾಗಿ ಸಂಚಾರ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಚಾಲಕನ ಪತ್ತೆಗೆ ತನಿಖೆ ಮುಂದುವರಿದಿದೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



