ಬೆಂಗಳೂರು: ಲಗ್ನಪತ್ರಿಕೆ ಹಂಚಲು ಹೋಗ್ತಿದ್ದಾಗ ಅಪಘಾತ; ಹಸೆಮಣೆ ಏರಬೇಕಿದ್ದ ಯುವತಿ ಸೇರಿ ಇಬ್ಬರು ಸಾವು
ಬೆಂಗಳೂರು ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ಲಗ್ನಪತ್ರಿಕೆ ಹಂಚಲು ಸ್ಕೂಟಿಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಕುಟುಂಬಗಳನ್ನು ದಿಗ್ಭ್ರಮೆಗೊಳಿಸಿದೆ...

ಬೆಂಗಳೂರು (Bengaluru): ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ. ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಮದುವೆಯ ಆಮಂತ್ರಣ ಪತ್ರಿಕೆ (Wedding Invitation) ಹಂಚಲು ಹೊರಟಿದ್ದ ಇಬ್ಬರು ಯುವತಿಯರು ಲಾರಿ ಡಿಕ್ಕಿಗೆ ಬಲಿಯಾಗಿದ್ದಾರೆ.
ಬೆಂಗಳೂರು-ಮೈಸೂರು ರಸ್ತೆಯ (Bengaluru-Mysuru Road) ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ (Deepanjali Nagar Metro Station) ಸಮೀಪ ಈ ಭೀಕರ ಅಪಘಾತ ಸಂಭವಿಸಿದೆ. ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಸಿಂದುಶ್ರೀ (29) ಮತ್ತು ವಿದ್ಯಾ (19) ಮೃತಪಟ್ಟವರು.
ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಇವರ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದಿದ್ದು, ಲಾರಿಯ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ..
ಮೃತ ಸಿಂದುಶ್ರೀ ಅವರ ಮದುವೆ ಸೋಮವಾರ ನಿಶ್ಚಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಂಬಂಧಿಕರಿಗೆ ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಸಿದ್ಧತೆ ಮಾಡಿಕೊಂಡಿದ್ದರು. ಅದರಂತೆ ಅತ್ತೆ ಮಗಳಾದ ವಿದ್ಯಾ ಜೊತೆ ಕತ್ರಿಗುಪ್ಪೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಆದರೆ, ಮದುವೆಯ ಸಂಭ್ರಮಕ್ಕೆ ಸಿದ್ಧವಾಗುತ್ತಿದ್ದ ಕುಟುಂಬಕ್ಕೆ ಈ ಅಪಘಾತ ಬರಸಿಡಿಲಿನಂತೆ ಎರಗಿದೆ.
ಮದುವೆಗೆ ಇನ್ನು ಕೇವಲ ನಾಲ್ಕು ದಿನಗಳು ಮಾತ್ರ ಬಾಕಿ ಇರುವಾಗ ಸಿಂದುಶ್ರೀ ಮೃತಪಟ್ಟಿರುವುದು ಕುಟುಂಬಸ್ಥರನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ಮದುವೆ ಆಮಂತ್ರಣ ನೀಡಲು ಹೊರಟಿದ್ದವರು ಮರಳಿ ಮನೆಗೆ ಬಾರದಿರುವುದು ಸಂಬಂಧಿಕರ ಆಕ್ರಂದನಕ್ಕೆ ಕಾರಣವಾಗಿದೆ.
ಇತ್ತ ಅಪಘಾತ ಸಂಭವಿಸಿದ ಕೂಡಲೇ ಲಾರಿ ನಿಲ್ಲಿಸಿ ಸಹಾಯ ಮಾಡುವ ಬದಲು ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಬ್ಯಾಟರಾಯನಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದು, ತಲೆಮರೆಸಿಕೊಂಡಿರುವ ಚಾಲಕನ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮದುವೆ ಮನೆಯಲ್ಲಿರಬೇಕಿದ್ದ ಸಂತೋಷದ ವಾತಾವರಣ ಕ್ಷಣಾರ್ಧದಲ್ಲಿ ದುಃಖವಾಗಿ ಬದಲಾಗಿದ್ದು, ಈ ಘಟನೆ ಸ್ಥಳೀಯರಲ್ಲೂ ತೀವ್ರ ಬೇಸರ ಮೂಡಿಸಿದೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.





