ಮಗಳಿಗೆ ಶೂ ಕೊಡಿಸಲು ಹೋಗ್ತಿದ್ದ ಅಪ್ಪ ಟಿಪ್ಪರ್‌ ಲಾರಿ ಹರಿದು ದುರಂತ ಸಾವು

ಮಗಳಿಗೆ ಶೂ ಖರೀದಿಸಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ತಂದೆಯ ಮೇಲೆ ಟಿಪ್ಪರ್ ಲಾರಿ ಹರಿದು ದುರಂತ ಸಂಭವಿಸಿದೆ.

  • ಟಿಪ್ಪರ್ ಲಾರಿ ಹರಿದು ತಂದೆ ಸ್ಥಳದಲ್ಲೇ ಸಾವು
  • ಬೈಕ್ ಅಪಘಾತದಲ್ಲಿ ನಾಲ್ಕು ವರ್ಷದ ಮಗಳಿಗೆ ಗಾಯ
  • ಕೆಂಗೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು (Bengaluru): ಮಗಳಿಗೆ ಶೂ ಕೊಡಿಸಲು ಬೈಕ್‌ನಲ್ಲಿ ತೆರಳುತ್ತಿದ್ದ ತಂದೆಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಕೆಂಗೇರಿ ಸಂಚಾರ ಠಾಣೆ ವ್ಯಾಪ್ತಿಯ ಹೆಮ್ಮಿಗೆಪುರದಲ್ಲಿ ನಡೆದಿದೆ. ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಕೋಡಿಪಾಳ್ಯ ನಿವಾಸಿ ಚೇತನ್ (36) ಮೃತರು. ಮಗಳೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಕೋಡಿಪಾಳ್ಯ ಮುಖ್ಯರಸ್ತೆಯ ಹೆಮ್ಮಿಗೆಪುರ ಬಳಿ ಬೈಕ್‌ ನಿಯಂತ್ರಣ ತಪ್ಪಿದೆ. ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ.

ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ (Tipper Lorry) ಕೆಳಗೆ ಬಿದ್ದಿದ್ದ ಚೇತನ್ ಅವರ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಚೇತನ್ ಅವರ ನಾಲ್ಕು ವರ್ಷದ ಮಗಳಿಗೂ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಗಳಿಗೆ ಶೂ ಕೊಡಿಸುವ ಉದ್ದೇಶದಿಂದ ಮನೆಯಿಂದ ಹೊರಟಿದ್ದ ತಂದೆ ದಾರಿಯಲ್ಲೇ ಪ್ರಾಣ ಕಳೆದುಕೊಂಡಿರುವುದು ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ. ಘಟನೆ ಕುರಿತು ಕೆಂಗೇರಿ ಸಂಚಾರ ಠಾಣೆಯಲ್ಲಿ (Kengeri Traffic Police) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories