ಬೆಂಗಳೂರು ಘಟನೆ: ಹೆಡ್ ಕಾನ್‌ಸ್ಟೆಬಲ್ ಕೈಯಿಂದಲೇ ಮೊಬೈಲ್ ದೋಚಿ ಪರಾರಿ

ಬೆಂಗಳೂರಿನ ಸಂಜಯ ನಗರ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಕೈಯಲ್ಲಿದ್ದ ಮೊಬೈಲ್ ಅನ್ನು ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು (Bengaluru): ಬೆಂಗಳೂರಿನಲ್ಲಿ ಮೊಬೈಲ್ ಕಳ್ಳತನದ ಘಟನೆಗಳು ಹೆಚ್ಚುತ್ತಿರುವ ನಡುವೆಯೇ, ಈ ಬಾರಿ ಪೊಲೀಸರೇ ಗುರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂಜಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಿ.ಬಿ.ಎಸ್ ಬಸ್ ನಿಲ್ದಾಣದ ಬಳಿ ಹೆಡ್ ಕಾನ್‌ಸ್ಟೆಬಲ್ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದಾರೆ.

ಗಂಗಾ ನಗರ ನಿವಾಸಿ ಹಾಗೂ ಸಿಬಿಐ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್. ಕೃಷ್ಣ ಅವರು ಈ ಬಗ್ಗೆ ದೂರು ನೀಡಿದ್ದಾರೆ. ಫೆಬ್ರವರಿ 16ರಂದು ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಅವರು ದೆಹಲಿಗೆ ಕೆಲಸದ ನಿಮಿತ್ತ ತೆರಳಲು ಬಸ್‌ಗಾಗಿ ಕಾಯುತ್ತಿದ್ದರು. ಬಸ್ ವಿಳಂಬವಾಗುತ್ತಿದ್ದ ಕಾರಣ ಟ್ಯಾಕ್ಸಿ ಬುಕ್ ಮಾಡಲು ಮೊಬೈಲ್ ಹೊರತೆಗೆದಾಗಲೇ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತುಕೊಂಡು ವೇಗವಾಗಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯ ಬಳಿಕ ರಸ್ತೆಯಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಪಡೆದು 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ದೆಹಲಿಯಿಂದ ವಾಪಸ್ಸಾದ ಎನ್. ಕೃಷ್ಣ ಅವರು ಫೆಬ್ರವರಿ 19ರಂದು ಠಾಣೆಗೆ ಬಂದು ಅಧಿಕೃತ ದೂರು ಸಲ್ಲಿಸಿದ್ದಾರೆ.

ಸಂಜಯ ನಗರ ಪೊಲೀಸರು ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಸೇರಿದಂತೆ ತನಿಖೆ ಆರಂಭಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್ ಬಳಸುವಾಗ ಎಚ್ಚರಿಕೆ ವಹಿಸುವಂತೆ ಪೊಲೀಸರು ಸಲಹೆ ನೀಡಿದ್ದಾರೆ.

ನಗರದಲ್ಲಿ ಹೆಚ್ಚುತ್ತಿರುವ ಇಂತಹ ಪ್ರಕರಣಗಳು ನಾಗರಿಕರಲ್ಲಿ ಆತಂಕ ಮೂಡಿಸಿವೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories