ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ! ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್, ಕಾರು, ಲಾರಿ, ಬಸ್ ಸೇರಿ ಹಲವು ವಾಹನಗಳು ಡಿಕ್ಕಿಯಾಗಿ ಭಾರೀ ಅಪಘಾತ ಸಂಭವಿಸಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದ್ದು 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯ ಅಂಚೆಮನೆ ಗೇಟ್ ಸಮೀಪ ಈ ದುರ್ಘಟನೆ ನಡೆದಿದ್ದು, ಹಲವು ವಾಹನಗಳು ಪರಸ್ಪರ ಡಿಕ್ಕಿಯಾಗಿವೆ.
ಬೈಕ್, ಎರಡು ಕಾರುಗಳು, ಲಾರಿ, ಬಸ್ ಮತ್ತು ಪಿಕಪ್ ವಾಹನ ಅಪಘಾತಕ್ಕೆ ಒಳಗಾಗಿವೆ. ಡಿಕ್ಕಿಯ ರಭಸ ಎಷ್ಟರ ಮಟ್ಟಿಗೆ ಇತ್ತೆಂದರೆ ಪಿಕಪ್ ವಾಹನ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ರಸ್ತೆಯ ಮಧ್ಯೆ ವಾಹನಗಳ ಅವಶೇಷಗಳು ಚದುರಿದ ದೃಶ್ಯ ಕಂಡುಬಂದಿದೆ. ಸ್ಥಳದಲ್ಲಿದ್ದ ಜನರು ಕೆಲಕಾಲ ಬೆಚ್ಚಿಬಿದ್ದಿದ್ದರು.
ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕೆಲವರಿಗೆ ತಲೆಗೆ ಮತ್ತು ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.
ಘಟನೆಯ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ಹಲವು ಕಿಲೋಮೀಟರ್‌ಗಳವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಪ್ರಯಾಣಿಕರು ಪರದಾಡಿದರು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ನೆಲಮಂಗಲ ಸಂಚಾರ ಪೊಲೀಸರು ಸಂಚಾರವನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.
ಸ್ಥಳೀಯರು ಕೂಡ ಗಾಯಾಳುಗಳ ರಕ್ಷಣೆಗೆ ಮುಂದಾಗಿ ಮಾನವೀಯತೆ ಮೆರೆದರು. ಕೆಲವರು ತಮ್ಮ ವಾಹನಗಳಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದರು. ಅಪಘಾತದ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ, ವೇಗ ಮತ್ತು ಅಜಾಗರೂಕ ಚಾಲನೆಯೇ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಅಪಘಾತದಿಂದ ಹಾನಿಗೊಳಗಾದ ವಾಹನಗಳನ್ನು ತೆರವುಗೊಳಿಸಿದ್ದಾರೆ.



