ಇಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಸಂಪೂರ್ಣ ಕಾರ್ಯಕ್ರಮದ ವಿವರ ಇಲ್ಲಿದೆ

ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಹೆಚ್‌ಎಎಲ್ ಏರ್‌ಪೋರ್ಟ್‌ನಿಂದ ಆರ್ಟ್ ಆಫ್ ಲಿವಿಂಗ್ ಆಶ್ರಮದವರೆಗೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಗರದಲ್ಲಿ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ಜಾರಿಯಾಗಿದ್ದು, ಸಾವಿರಾರು ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ.

ಬೆಂಗಳೂರು (Bengaluru): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ನಗರಾದ್ಯಂತ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ.

ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ, ಮೊದಲಿಗೆ ಹೆಚ್‌ಎಎಲ್ ವಿಮಾನ ನಿಲ್ದಾಣದ ಮುಂಭಾಗದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಅವರು ಭಾಷಣ ಮಾಡುವ ನಿರೀಕ್ಷೆಯಿದೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಜನರು ಸೇರುವ ಸಾಧ್ಯತೆ ಇರುವುದರಿಂದ ಸ್ಥಳದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ.

ಹೆಚ್‌ಎಎಲ್‌ನಿಂದ ಆಶ್ರಮದತ್ತ ಮೋದಿ ಪ್ರಯಾಣ

ಹೆಚ್‌ಎಎಲ್ ಏರ್‌ಪೋರ್ಟ್ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಹೆಲಿಕಾಪ್ಟರ್ ಮೂಲಕ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ತೆರಳಲಿದ್ದಾರೆ. ಅಲ್ಲಿ ಧ್ಯಾನ ಮಂದಿರ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ.

ಆಶ್ರಮದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಪ್ರಧಾನಿ ಮೋದಿ ಉಳಿಯಲಿದ್ದು, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲೂ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಆಶ್ರಮದ ಸುತ್ತಮುತ್ತಲೂ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬಿಜೆಪಿ ಕಾರ್ಯಕರ್ತರಲ್ಲಿ ವಿಶೇಷ ಉತ್ಸಾಹ ಕಂಡುಬಂದಿದೆ. ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಸಾಧನೆ ಹಿನ್ನೆಲೆ ಪಕ್ಷದಿಂದ ವಿಶೇಷ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಾಯಕರು ತಿಳಿಸಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಈ ಕುರಿತು ಮಾಹಿತಿ ನೀಡಿದ್ದು, ಹೆಚ್‌ಎಎಲ್ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಬಳಿ ನಡೆಯುವ ಕಾರ್ಯಕ್ರಮದಲ್ಲಿ 10 ರಿಂದ 15 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದಿದ್ದಾರೆ.

ನಗರದ ಹಲವು ಭಾಗಗಳಲ್ಲಿ ಟ್ರಾಫಿಕ್ ಬದಲಾವಣೆ

ಪ್ರಧಾನಿ ಭೇಟಿ ಹಿನ್ನೆಲೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಹೆಚ್‌ಎಎಲ್ ಏರ್‌ಪೋರ್ಟ್, ಕನಕಪುರ ರಸ್ತೆ ಹಾಗೂ ಆಶ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧಗಳು ಇರಬಹುದಾದ್ದರಿಂದ ಸಾರ್ವಜನಿಕರು ಪರ್ಯಾಯ ಮಾರ್ಗ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಮಧ್ಯಾಹ್ನ ವೇಳೆಗೆ ಪ್ರಧಾನಿ ಮೋದಿ ಬೆಂಗಳೂರಿನಿಂದ ಹೈದರಾಬಾದ್‌ಗೆ ಪ್ರಯಾಣ ಬೆಳೆಸಲಿದ್ದಾರೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories