ರಾಜಕಾಲುವೆಯಲ್ಲಿ ಶವ ಪತ್ತೆ! ಬೆಂಗಳೂರು ಹೊರವಲಯದ ಯಲಹಂಕ ಬಳಿ ಬೆಚ್ಚಿಬೀಳಿಸುವ ಘಟನೆ
ಬೆಂಗಳೂರು ಹೊರವಲಯದಲ್ಲಿ ಪೋಕ್ಸೋ ಪ್ರಕರಣದ ಆರೋಪಿಯನ್ನು ಕೊಲೆ ಮಾಡಿ ರಾಜಕಾಲುವೆಗೆ ಎಸೆದ ಘಟನೆ ಬೆಚ್ಚಿಬೀಳಿಸಿದೆ. ಬಾಲಕಿಯ ತಂದೆ ಸೇರಿ ನಾಲ್ವರನ್ನು ಬಂಧಿಸಿರುವ ಪೊಲೀಸರು ಪ್ರಕರಣದ ಕುರಿತು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (Bengaluru): ಬೆಂಗಳೂರು ಹೊರವಲಯದ ಯಲಹಂಕ ಸಮೀಪ ಭೀಕರ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯನ್ನು ಕೊಲೆ ಮಾಡಿ, ಬಳಿಕ ಶವವನ್ನು ರಾಜಕಾಲುವೆಗೆ ಎಸೆದಿರುವ ಘಟನೆ ನಗರದಲ್ಲಿ ಸಂಚಲನ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಂದೆ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ವ್ಯಕ್ತಿಯನ್ನು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರಮೇಶ್ ಶ್ರೀಶೈಲ ಪಟ್ಟದಕಲ್ಮಠ (36) ಎಂದು ಗುರುತಿಸಲಾಗಿದೆ. ಆತ ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದು, ಯಲಹಂಕ ಭಾಗದ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.
ಕೆಲ ದಿನಗಳ ಹಿಂದೆ ಅಲ್ಲಾಳಸಂದ್ರ ರಾಜಕಾಲುವೆಯಲ್ಲಿ ಶವ ಪತ್ತೆಯಾಗಿತ್ತು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದರು. ನಂತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿತ್ತು.
ಮೃತನ ಸಂಬಂಧಿಕರು, ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಬಾಲಕಿಯ ತಂದೆ ಮತ್ತು ಆತನ ಪರಿಚಿತರ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದರು. ಈ ಮಾಹಿತಿ ಆಧರಿಸಿ ಪೊಲೀಸರು ತನಿಖೆ ತೀವ್ರಗೊಳಿಸಿದಾಗ ಬೆಚ್ಚಿಬೀಳಿಸುವ ಸತ್ಯ ಹೊರಬಿದ್ದಿದೆ.
ಪೊಲೀಸರ ಪ್ರಕಾರ, ರಮೇಶ್ ವಿರುದ್ಧ 2022ರಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬಾಲಕಿ ಮತ್ತು ರಮೇಶ್ ಸಂಬಂಧಿಕರಾಗಿದ್ದು, ಇಬ್ಬರ ನಡುವೆ ಆಪ್ತತೆ ಇದ್ದುದಾಗಿ ತನಿಖೆಯಲ್ಲಿ ತಿಳಿದುಬಂದಿದೆ. ಜೈಲಿನಿಂದ ಬಿಡುಗಡೆಯಾದ ಬಳಿಕ ರಮೇಶ್ ಮತ್ತೆ ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ.
ಮಗಳ ಭವಿಷ್ಯದ ಬಗ್ಗೆ ಆತಂಕಗೊಂಡ ತಂದೆ, ಪ್ರತೀಕಾರ ತೀರಿಸಿಕೊಳ್ಳಲು ಸ್ನೇಹಿತರ ಸಹಾಯ ಪಡೆದಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಚಿನ್ನಯ್ಯ ಮಾತಪತಿ, ಚೇತನ ಮದಾರ ಮತ್ತು ವಿನಾಯಕ ಗುರುವ ಎಂಬವರೊಂದಿಗೆ ಸೇರಿ ಹತ್ಯೆಯ ಸಂಚು ರೂಪಿಸಲಾಗಿತ್ತು ಎಂದು ತಿಳಿದುಬಂದಿದೆ.
ಆರೋಪಿಗಳು ಮೊದಲು ರಮೇಶ್‌ನನ್ನು ಬಾರ್‌ಗೆ ಕರೆದುಕೊಂಡು ಹೋಗಿ, ಬಳಿಕ ಕೊಲೆ ನಡೆಸಿದ್ದಾರೆ ಎನ್ನಲಾಗಿದೆ. ನಂತರ ಶವವನ್ನು ಅಲ್ಲಾಳಸಂದ್ರ ರಾಜಕಾಲುವೆಗೆ ಎಸೆದು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದರೆಂದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದ್ದು, ಪ್ರಕರಣದ ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



