ಬೆಂಗಳೂರು ಮಳೆ ದುರಂತ: ಕಾಂಪೌಂಡ್ ಗೋಡೆ ಕುಸಿದು ಇಬ್ಬರು ಕಾರ್ಮಿಕರ ದುರ್ಮರಣ
ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ನಿರಂತರ ಮಳೆಯ ಪರಿಣಾಮ ಮತ್ತೊಂದು ದುರಂತ ಸಂಭವಿಸಿದೆ. ನಿರ್ಮಾಣ ಕಾಮಗಾರಿ ವೇಳೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆ ಮತ್ತೊಂದು ಜೀವಹಾನಿಗೆ ಕಾರಣವಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಗೋಡೆ ಏಕಾಏಕಿ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಮೃತರನ್ನು ದ್ಯಾಮಪ್ಪ ಹಾಗೂ ಬಾಬುಲಾಲ್ ಎಂದು ಗುರುತಿಸಲಾಗಿದೆ. ಸ್ಥಳೀಯ ಮಾಹಿತಿಯ ಪ್ರಕಾರ, ಪಟೇಲ್ ಎಂಬುವರಿಗೆ ಸೇರಿದ ಜಾಗದಲ್ಲಿ ಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ವೇಳೆ ಮಳೆಯಿಂದ ನೆನೆದಿದ್ದ ಗೋಡೆ ಏಕಾಏಕಿ ಕುಸಿದು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ.
ಅಪಘಾತದ ನಂತರ ಸ್ಥಳೀಯರು ಹಾಗೂ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಇಬ್ಬರನ್ನೂ ಉಳಿಸಲು ಸಾಧ್ಯವಾಗಲಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ. ಕೆಲವೇ ದಿನಗಳ ಹಿಂದೆ ಕಾಂಪೌಂಡ್ ಗೋಡೆ ಕುಸಿತದಿಂದ ಹಲವರು ಪ್ರಾಣ ಕಳೆದುಕೊಂಡಿದ್ದ ಘಟನೆಗಳು ನಡೆದಿದ್ದವು. ಇದೀಗ ಮತ್ತೊಮ್ಮೆ ಸಂಭವಿಸಿದ ಈ ದುರಂತ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗೋಡೆ ಕುಸಿತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು
ಇನ್ನೊಂದೆಡೆ, ತುಮಕೂರು ಜಿಲ್ಲೆಯ ದೇವರಮರಡಿ ಕೆರೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಗೌತಮ್ ಎಂಬ ವಿದ್ಯಾರ್ಥಿ ತನ್ನ ಸಹೋದರ ಹಾಗೂ ಸ್ನೇಹಿತರೊಂದಿಗೆ ಕೆರೆ ಬಳಿ ತೆರಳಿದ್ದ. ಆಟವಾಡುತ್ತಿದ್ದ ವೇಳೆ ತೆಪ್ಪದ ಮೇಲೆ ಹತ್ತಿದ್ದ ಆತ ಸಮತೋಲನ ಕಳೆದುಕೊಂಡು ನೀರಿಗೆ ಬಿದ್ದಿದ್ದಾನೆ. ಬಳಿಕ ಕಾಣೆಯಾಗಿದ್ದ ವಿದ್ಯಾರ್ಥಿಯ ಶವವನ್ನು ಅಗ್ನಿಶಾಮಕ ಸಿಬ್ಬಂದಿ ಇಂದು ಕೆರೆಯಿಂದ ಹೊರತೆಗೆದಿದ್ದಾರೆ. ಈ ಸಂಬಂಧ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



