ಬೆಂಗಳೂರು ಬಾಡಿಗೆ ಮನೆಯಲ್ಲಿ ಯುವಕನ ಶವ ಪತ್ತೆ! ಇಬ್ಬರು ಮಕ್ಕಳ ತಾಯಿಯ ಸಹವಾಸ ತಂದ ಕುತ್ತು

ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿ ಜೊತೆಯಾಗಿದ್ದ ಮಹಿಳೆಯಿಂದ ಕಿರುಕುಳ ಅನುಭವಿಸುತ್ತಿದ್ದ ಯುವಕ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ನಗರದ ಶ್ರೀಗಂಧ ನಗರದಲ್ಲಿ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿ ವಾಸವಾಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೃತ ಯುವಕನನ್ನು ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಎಂದು ಗುರುತಿಸಲಾಗಿದೆ. ದಾವಣಗೆರೆ ಮೂಲದ ಮಹಿಳೆಯೊಬ್ಬಳ ಜೊತೆ ಆತ ಕಳೆದ ಕೆಲವು ತಿಂಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದನು. ಇಬ್ಬರೂ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುವ ವೇಳೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ನಂತರ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ.

ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಪತಿ ಮತ್ತು ಮಕ್ಕಳನ್ನು ಬಿಟ್ಟು ಬಂದಿದ್ದ ಆಕೆ, ತಿಪ್ಪೇಸ್ವಾಮಿ ಜೊತೆ ಶ್ರೀಗಂಧ ನಗರದಲ್ಲಿ ಬಾಡಿಗೆ ಮನೆ ಪಡೆದು ಗಂಡ-ಹೆಂಡತಿ ಎಂದು ಪರಿಚಯಿಸಿಕೊಂಡು ವಾಸಿಸುತ್ತಿದ್ದರು. ತಿಂಗಳಿಗೆ ಮೂರು ಸಾವಿರ ರೂಪಾಯಿ ಬಾಡಿಗೆ ನೀಡಿ ಜೀವನ ಸಾಗಿಸುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಇಬ್ಬರ ನಡುವೆ ಜಗಳಗಳು ಹೆಚ್ಚಾಗಿದ್ದವು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಮಹಿಳೆ ತನ್ನನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಸಂಬಂಧ ಮುರಿದು ಬಿಡು ಎಂದು ಹೇಳಿ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆಯ ಬಳಿಕ ಮಹಿಳೆ ನಾಪತ್ತೆಯಾಗಿದ್ದು, ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ಸಾವಿಗೆ ಮಹಿಳೆಯೇ ಕಾರಣ ಎಂದು ಆರೋಪಿಸಿರುವ ಪೊಲೀಸರು ಆಕೆಯ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories