ವಿಡಿಯೋ ಮಾಡಿಟ್ಟು ವಿದ್ಯಾರ್ಥಿ ಆತ್ಮಹತ್ಯೆ, ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಎಂದ…

ಶಿಕ್ಷಣ ವ್ಯವಸ್ಥೆ ಬದಲಾಗಬೇಕು, ನನ್ನ ಸಾವು ಬದಲಾವಣೆಗೆ ಬುನಾದಿ ಹಾಕಬೇಕು ಎಂದು ವಿಡಿಯೊ ಮಾಡಿಟ್ಟು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹಾಸನ ಜಿಲ್ಲೆಯಲ್ಲಿ ಅಸ್ತಿತ್ವದಲ್ಲಿರುವ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಮನವಿ ಮಾಡಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಿಕ್ಷಣ ವ್ಯವಸ್ಥೆ ಬದಲಾವಣೆ ಆಗದಿದ್ದರೆ ಸಾಧನೆ ಸಾಧ್ಯವಿಲ್ಲ. ಶಿಕ್ಷಣ ವ್ಯವಸ್ಥೆ ಬದಲಾವಣೆಗೆ ನನ್ನ ಬಲಿದಾನ ದಾರಿ ದೀಪವಾಗಲಿ ಎಂದು ಸಾಯುವ ಮುನ್ನ ವಿಡಿಯೊದಲ್ಲಿ ಹೇಳಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ನಿಜಕ್ಕೂ ಮನಕಲಕುವಂತಿದೆ.

ವಿದ್ಯಾರ್ಥಿಯನ್ನು ಅರಸೀಕೆರೆ ನಿವಾಸಿ ಹೇಮಂತಗೌಡ (20) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಮಂಗಳವಾರ ಪೊಲೀಸರು ವಿಡಿಯೋವನ್ನು ವಶಪಡಿಸಿಕೊಂಡಿದ್ದಾರೆ. 13 ನಿಮಿಷ ಮತ್ತು 21 ಸೆಕೆಂಡುಗಳ ವೀಡಿಯೊದಲ್ಲಿ, ಹೇಮಂತಗೌಡ ಮುಖ್ಯಮಂತ್ರಿ, ಉಪಕುಲಪತಿಗಳು ಮತ್ತು ಎಲ್ಲಾ ಪಕ್ಷಗಳ ಪ್ರಮುಖ ನಾಯಕರನ್ನು ಪ್ರಸ್ತುತ ಶಿಕ್ಷಣ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಕೇಳಿದ್ದಾರೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆಯಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅವರು ಹೇಳಿದ್ದಾರೆ.