ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ, ನವಜಾತ ಶಿಶುಗಳು ಸೇರಿದಂತೆ 10 ಮಕ್ಕಳು ಸಜೀವ ದಹನ

Story Highlights

ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಭೀಕರ ದುರಂತವೊಂದು ನಡೆದಿದೆ. ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಹತ್ತು ಮಕ್ಕಳು ಸಜೀವ ದಹನವಾದರು.

ಲಕ್ನೋ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಹತ್ತು ಮಕ್ಕಳು ಸಜೀವ ದಹನವಾದರು.

ಮೃತರಲ್ಲಿ ಒಂದು ದಿನ ಪ್ರಾಯದ ನವಜಾತ ಶಿಶುಗಳೂ ಸೇರಿದ್ದಾರೆ. ಇನ್ನೂ 44 ಶಿಶುಗಳನ್ನು ರಕ್ಷಿಸಲಾಗಿದೆ. ಆದರೆ ಅವರಲ್ಲಿ 16 ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.

ಶುಕ್ರವಾರ ರಾತ್ರಿ 10.45ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಏಕಾಏಕಿ ಗಾಬರಿಗೊಂಡರು. ತಮ್ಮ ಪ್ರಾಣ ಉಳಿಸಿಕೊಳ್ಳಲು ಓಡಿ ಬರುತ್ತಿದ್ದಂತೆ ಕಾಲ್ತುಳಿತ ಉಂಟಾಯಿತು.

ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಘಟನೆಯ ವೇಳೆ ಒಟ್ಟು 54 ಮಕ್ಕಳು ಎನ್‌ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಶುಕ್ರವಾರ ರಾತ್ರಿ 10.45ರ ವೇಳೆಗೆ ಆಕ್ಸಿಜನ್ ಕಾನ್ಸಟ್ರೇಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಮಕ್ಕಳ ವಾರ್ಡ್ ಕೊಠಡಿಗಳಲ್ಲಿ ಆಮ್ಲಜನಕ ಸಂಪೂರ್ಣ ಹರಡಿದ್ದರಿಂದ ಬೆಂಕಿ ಭಾರೀ ಪ್ರಮಾಣದಲ್ಲಿ ವ್ಯಾಪಿಸಿದೆ ಎಂದು ಆಸ್ಪತ್ರೆ ಅಧೀಕ್ಷಕ ತಿಳಿಸಿದ್ದಾರೆ. ಮೃತರಲ್ಲಿ ಏಳು ಮಂದಿಯನ್ನು ಗುರುತಿಸಲಾಗಿದ್ದು, ಉಳಿದ ಮೂವರಿಗೆ ಡಿಎನ್‌ಎ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

ಈ ಘಟನೆ ಹೃದಯವಿದ್ರಾವಕವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮಕ್ಕಳ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡ ಮಕ್ಕಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಘಟನೆಯ ಕುರಿತು ಕೂಡಲೇ ಸಮಗ್ರ ತನಿಖೆ ನಡೆಸಬೇಕು ಎಂದು ಸೂಚಿಸಲಾಗಿದೆ.

ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಲಾಗಿದೆ. ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ ರೂ.5 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50 ಸಾವಿರ ನೀಡಲಾಗುವುದು ಎಂದು ತಿಳಿದುಬಂದಿದೆ. ಅದೇ ರೀತಿ ಪ್ರಧಾನಿ ಮೋದಿ ಅವರು ಸಂತ್ರಸ್ತ ಕುಟುಂಬಗಳಿಗೆ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ 50 ಸಾವಿರ ರೂ. ಘೋಷಿಸಿದ್ದಾರೆ

ಸಿಎಂ ಆದೇಶದ ಮೇರೆಗೆ ರಾಜ್ಯದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನವಜಾತ ಶಿಶುಗಳ ಸಾವು ಅತ್ಯಂತ ದುರದೃಷ್ಟಕರವಾಗಿದ್ದು, ಘಟನೆಯ ಬಗ್ಗೆ ಆರೋಗ್ಯ ಇಲಾಖೆ ಮೊದಲ ತನಿಖೆ ನಡೆಸಲಿದೆ. ಪೊಲೀಸರು ಎರಡನೇ ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಅದರಲ್ಲಿ ಅಗ್ನಿಶಾಮಕ ದಳವೂ ಕೈಜೋಡಿಸಲಿದೆ ಎಂದರು.

10 Newborns Killed In Up Medical College Fire Tragedy

Related Stories