ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ! ಮೂವರು ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ
ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ತೋಂಕಾಲನ್ ಗ್ರಾಮದಲ್ಲಿ ಭಾರೀ ಸ್ಫೋಟ ಸಂಭವಿಸಿ ಜನರನ್ನು ಬೆಚ್ಚಿಬೀಳಿಸಿದೆ. ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ.
ಗುರುವಾರ ಬೆಳಗ್ಗೆ ಸುಮಾರು 11.30ರ ವೇಳೆಗೆ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರ್ಖಾನೆಯೊಳಗೆ ಸ್ಫೋಟದ ಸದ್ದು ಕೇಳುತ್ತಿದ್ದಂತೆಯೇ ಸುತ್ತಮುತ್ತಲಿನ ಜನರು ಭಯಭೀತರಾಗಿ ಹೊರಗೆ ಓಡಿದ್ದಾರೆ.
ಅವಘಡದಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 13 ಮಂದಿಗೆ ದೇವಾಸ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ 12 ಮಂದಿಯನ್ನು ಇಂಡೋರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಮಾಹಿತಿ ತಿಳಿದ ತಕ್ಷಣ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿವೆ. ಅವಶೇಷಗಳಡಿ ಸಿಲುಕಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಭಾಗಶಃ ಕಟ್ಟಡ ಕುಸಿದಿದೆ ಎಂದು ವರದಿಯಾಗಿದೆ. ಕೆಲ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚುವ ಭೀತಿ ಇದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಕ್ರಮವಾಗಿ ಕಾರ್ಖಾನೆ ನಡೆಸಲಾಗುತ್ತಿತ್ತೇ ಎಂಬುದರ ಬಗ್ಗೆ ತನಿಖೆ ಆರಂಭಿಸಿದ್ದಾರೆ.



