ಟ್ಯಾಂಕರ್‌ಗೆ ಬಸ್ ಡಿಕ್ಕಿ, ನಾಲ್ವರು ಸಜೀವ ದಹನ! 10 ಮಂದಿ ಆಸ್ಪತ್ರೆಗೆ ದಾಖಲು

ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ಟ್ಯಾಂಕರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಪ್ರಯಾಣಿಕರು ಜೀವಂತ ದಹನಗೊಂಡು ಹಲವರು ಗಾಯಗೊಂಡಿದ್ದಾರೆ.

ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯ ಸಂಗಾನಿ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ ನಾಲ್ವರು ಪ್ರಯಾಣಿಕರ ಜೀವ ಬಲಿತೆಗೆದುಕೊಂಡಿದೆ. ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ಬೆಂಕಿಗಾಹುತಿಯಾದ ಪರಿಣಾಮ ಈ ದುರ್ಘಟನೆ ನಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಡಾಂಬರು ತುಂಬಿದ ಟ್ಯಾಂಕರ್‌ನ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದೆ. ಇದೇ ವೇಳೆ ಅಹಮದಾಬಾದ್‌ನಿಂದ ರಾಜ್‌ಕೋಟ್‌ಗೆ ತೆರಳುತ್ತಿದ್ದ ಖಾಸಗಿ ಬಸ್ ಹಿಂದಿನಿಂದ ಬಂದು ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ನಂತರ ಟ್ಯಾಂಕರ್‌ನಲ್ಲಿದ್ದ ಡಾಂಬರು ಬಸ್ಸಿನ ಮೇಲೆ ಹರಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿದೆ. ಬಸ್ಸಿನೊಳಗೆ ಸುಮಾರು 40 ಪ್ರಯಾಣಿಕರಿದ್ದು, ನಾಲ್ವರು ಹೊರಬರಲು ಸಾಧ್ಯವಾಗದೆ ಸಜೀವ ದಹನಗೊಂಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ 10 ಮಂದಿಯನ್ನು ರಾಜ್‌ಕೋಟ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರು ಪ್ರಾಣ ಉಳಿಸಿಕೊಳ್ಳಲು ಬಸ್ಸಿನಿಂದ ಜಿಗಿದ ಪರಿಣಾಮ ಗಂಭೀರ ಗಾಯಗಳಿಗೆ ಒಳಗಾಗಿದ್ದಾರೆ.

ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆ ಮೆರೆದು ಕಬ್ಬಿಣದ ರಾಡ್‌ಗಳಿಂದ ಕಿಟಕಿಗಳನ್ನು ಒಡೆದು ಹಲವು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ.

ಅಪಘಾತದ ಪರಿಣಾಮ ಹೆದ್ದಾರಿಯಲ್ಲಿ ಹಲವಾರು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories