ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಕಾರ್ಮಿಕರು ಸ್ಥಳದಲ್ಲೇ ದುರ್ಮರಣ
ಅಹಮದಾಬಾದ್ನ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಎಂಟು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಮಾಲೀಕನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

ಅಹಮದಾಬಾದ್: ಗುಜರಾತ್ನ ಅಹಮದಾಬಾದ್ ನಗರದ ವಸ್ತ್ರಲ್ ಪ್ರದೇಶದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟ ಎಂಟು ಕಾರ್ಮಿಕರ ಜೀವ ಬಲಿ ಪಡೆದಿದೆ. ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶನಿವಾರ ಮಧ್ಯಾಹ್ನ ರಾಮೋಲ್-ಗತ್ರಾಡ್ ರಸ್ತೆಯ ಸಮೀಪದ ಮೆಹಮೂದ್ಪುರ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿತು. ಸ್ಫೋಟದ ತೀವ್ರತೆಗೆ ಕಾರ್ಖಾನೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಒಳಗಿದ್ದ ಕಾರ್ಮಿಕರು ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡರು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ದುರಂತದ ಸಂದರ್ಭದಲ್ಲಿ ಸಮೀಪದಲ್ಲಿದ್ದ ಕ್ಷಿಪ್ರ ಕಾರ್ಯಪಡೆ (RAF) ಸಿಬ್ಬಂದಿ ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾದರು. ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪುವ ಮುನ್ನವೇ ಬೆಂಕಿಯ ನಡುವೆ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಕಳುಹಿಸಿದ್ದರಿಂದ ಇನ್ನಷ್ಟು ಪ್ರಾಣಹಾನಿ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ. ಸ್ಫೋಟ ಸಂಭವಿಸಿದ ಕಾರ್ಖಾನೆಯ ಪರವಾನಗಿಯನ್ನು ಈ ಹಿಂದೆ ಸರ್ಕಾರ ರದ್ದುಗೊಳಿಸಿದ್ದರೂ, ಮಾಲೀಕ ಅಕ್ರಮವಾಗಿ ಘಟಕವನ್ನು ನಡೆಸುತ್ತಿದ್ದ ಎನ್ನಲಾಗಿದೆ. ಘಟನೆಯ ವೇಳೆ ಕಾರ್ಖಾನೆಯಲ್ಲಿ ಎಂಟರಿಂದ ಹತ್ತು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳದಿಂದ ಎಂಟು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಗಾಯಾಳುಗಳ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಅಕ್ರಮವಾಗಿ ಕಾರ್ಖಾನೆ ನಡೆಸಿದ ಆರೋಪದಡಿ ಮಾಲೀಕ ಮೆಹುಲ್ ದೋಡಿಯಾ ವಿರುದ್ಧ ಸ್ಫೋಟಕ ಕಾಯ್ದೆ ಸೇರಿದಂತೆ ವಿವಿಧ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ತಾಂತ್ರಿಕ ಹಾಗೂ ವಿಧಿವಿಜ್ಞಾನ ತಜ್ಞರ ತಂಡವೂ ಸ್ಥಳ ಪರಿಶೀಲನೆ ನಡೆಸುತ್ತಿದೆ.



