ನಿಂತಿದ್ದ ಶಾಲಾ ಬಸ್‌ಗೆ ಲಾರಿ ಡಿಕ್ಕಿ: 4 ಮಕ್ಕಳು ಸ್ಥಳದಲ್ಲೇ ಸಾವು, 32 ಮಂದಿಗೆ ಗಂಭೀರ ಗಾಯ

ಉತ್ತರ ಪ್ರದೇಶದ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ಶಾಲಾ ಬಸ್‌ಗೆ ವೇಗವಾಗಿ ಬಂದ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 32 ಮಂದಿ ಗಾಯಗೊಂಡಿದ್ದಾರೆ.

  • ಶಾಲಾ ಬಸ್‌ಗೆ ಲಾರಿ ಡಿಕ್ಕಿ
  • ನಾಲ್ವರು ವಿದ್ಯಾರ್ಥಿಗಳು ಸಾವು
  • 32 ಮಂದಿಗೆ ಗಂಭೀರ ಗಾಯ

ಆಗ್ರಾದ ತಾಜ್‌ಮಹಲ್ (Taj Mahal) ಪ್ರವಾಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಶಾಲಾ ಮಕ್ಕಳ ಪ್ರಯಾಣ ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಉತ್ತರ ಪ್ರದೇಶದ (Uttar Pradesh) ಕನ್ನೌಜ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದು, ಹಲವರು ಆಸ್ಪತ್ರೆ ಸೇರಿದ್ದಾರೆ.

ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯ ಥಾಥಿಯಾ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಕೌಶಾಂಬಿಯ ಓರಿಯಂಟಲ್ ಪಬ್ಲಿಕ್ ಸ್ಕೂಲ್‌ಗೆ ಸೇರಿದ ಬಸ್‌ನಲ್ಲಿ ಸುಮಾರು 50 ಮಂದಿ ಪ್ರಯಾಣಿಸುತ್ತಿದ್ದರು. ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ವಿದ್ಯಾರ್ಥಿಗಳಿಗೆ ಶೌಚಾಲಯಕ್ಕೆ ಹೋಗುವ ಅಗತ್ಯ ಉಂಟಾದ ಕಾರಣ ಚಾಲಕ ರಸ್ತೆ ಬದಿಯಲ್ಲಿ ಬಸ್ ನಿಲ್ಲಿಸಿದ್ದರು.

ಈ ಸಂದರ್ಭದಲ್ಲಿ ಹಿಂದಿನಿಂದ ವೇಗವಾಗಿ ಬಂದ ಟ್ರಕ್ (Truck) ನಿಯಂತ್ರಣ ತಪ್ಪಿ ನಿಂತಿದ್ದ ಶಾಲಾ ಬಸ್‌ಗೆ ಬಲವಾಗಿ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಹಿಂಭಾಗ ಸಂಪೂರ್ಣ ಜಖಂಗೊಂಡಿದ್ದು, ಒಳಗಿದ್ದ ಮಕ್ಕಳಲ್ಲಿ ಆತಂಕ ಮತ್ತು ಗೊಂದಲ ಉಂಟಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು, ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇ ಅಧಿಕಾರಿಗಳು ಹಾಗೂ ಸ್ಥಳೀಯ ವಾಹನ ಸವಾರರು ರಕ್ಷಣಾ ಕಾರ್ಯಕ್ಕೆ ಮುಂದಾದರು. ಬಸ್‌ನೊಳಗೆ ಸಿಲುಕಿದ್ದ ಮಕ್ಕಳನ್ನು ಹೊರತೆಗೆದು ಆಂಬ್ಯುಲೆನ್ಸ್‌ಗಳ ಮೂಲಕ ಸಮೀಪದ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಯಿತು. ಆದರೆ, ನಾಲ್ವರು ವಿದ್ಯಾರ್ಥಿಗಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಮೃತ ವಿದ್ಯಾರ್ಥಿಗಳನ್ನು ಆರ್ಯನ್ ಚೌರಾಸಿಯಾ (14), ರಜಿಯುಲ್ಲಾ (16), ಅರ್ಮಾನ್ (17) ಮತ್ತು ಜೈದ್ ಮೀರ್ಜಾ (17) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಒಟ್ಟು 32 ಮಂದಿ ಗಾಯಗೊಂಡಿದ್ದು, ಇವರಲ್ಲಿ 24 ವಿದ್ಯಾರ್ಥಿಗಳು ಹಾಗೂ ಎಂಟು ಮಂದಿ ಶಾಲಾ ಸಿಬ್ಬಂದಿ ಸೇರಿದ್ದಾರೆ.

ಶಾಲೆಯ ಮ್ಯಾನೇಜರ್ ಸಲ್ಮಾನ್ ಮತ್ತು ಗಾಯಗೊಂಡ ವಿದ್ಯಾರ್ಥಿನಿಯೊಬ್ಬರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾನ್ಪುರಕ್ಕೆ ಸ್ಥಳಾಂತರಿಸಲಾಗಿದೆ. ಉಳಿದ ಗಾಯಾಳುಗಳಿಗೆ ಸ್ಥಳೀಯ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಮುಂದುವರಿದಿದೆ.

ವಿಷಯ ತಿಳಿದ ಜಿಲ್ಲಾಧಿಕಾರಿ ಆಶುತೋಷ್ ಮೋಹನ್ ಅಗ್ನಿಹೋತ್ರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಪಘಾತದಿಂದ ಪಾರಾದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ಮತ್ತೊಂದು ಬಸ್ ವ್ಯವಸ್ಥೆ ಮಾಡಲಾಗಿದೆ.

ಪ್ರವಾಸದ ಸಂಭ್ರಮದೊಂದಿಗೆ ಮನೆಗೆ ಮರಳಬೇಕಿದ್ದ ಮಕ್ಕಳು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಪೋಷಕರು ಮತ್ತು ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ. ಅಪಘಾತಕ್ಕೆ ಕಾರಣವಾದ ಲಾರಿ ಚಾಲಕನ ನಿರ್ಲಕ್ಷ್ಯದ ಬಗ್ಗೆಯೂ ತನಿಖೆ ನಡೆಯಬೇಕಿದೆ.

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories