ಕಾಶ್ಮೀರದಲ್ಲಿ ಮುಂದುವರೆದ ಹಿಂಸಾಚಾರ: ಕಿರುತೆರೆ ನಟಿಯನ್ನು ಗುಂಡಿಕ್ಕಿ ಕೊಂದ ಉಗ್ರರು

Tv Actor Shot Dead By Militants In Budgam: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕೇಂದ್ರ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಹಿಶ್ರು ಪ್ರದೇಶದಲ್ಲಿ ಬುಧವಾರ ಸಂಜೆ ಉಗ್ರರು ದಾಳಿ ನಡೆಸಿದ್ದಾರೆ. ಕಿರುತೆರೆ ನಟಿ ಅಮರೀನ್ ಭಟ್ (35) ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆಸಿದ ಭಯೋತ್ಪಾದಕರು ಬರ್ಬರವಾಗಿ ಗುಂಡಿಕ್ಕಿ ಕೊಂದಿದ್ದಾರೆ.
10 ವರ್ಷದ ಬಾಲಕನೊಬ್ಬ ಉಗ್ರರ ಗುಂಡಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಧವಾರ ಸಂಜೆ 7:55ರ ಸುಮಾರಿಗೆ ಅಮರೀನ್ ಭಟ್ ಅವರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಕೆ ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಗುಂಡಿನ ಗಾಯಗಳೊಂದಿಗೆ ಪಾರಾದ 10 ವರ್ಷದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಗೆ ಸೇರಿದ ಮೂವರು ಉಗ್ರರು ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಆರಂಭದಲ್ಲಿ ಅಂದಾಜಿಸಿದ್ದಾರೆ. ಗುಂಡಿನ ದಾಳಿಯ ಮಾಹಿತಿ ಪಡೆದ ಕೂಡಲೇ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಒಂದು ವಾರದ ಹಿಂದೆ ಕಾಶ್ಮೀರದಲ್ಲಿ ರಾಹುಲ್ ಭಟ್ ಎಂಬ ಯುವಕ ಪಂಡಿತನನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದರು. ಘಟನೆ ಬಗ್ಗೆ ಸ್ಥಳೀಯವಾಗಿ ತೀವ್ರ ಆತಂಕ ವ್ಯಕ್ತವಾಗಿತ್ತು. ಇಂದಿನ ಹತ್ಯಾಕಾಂಡ ಸೇರಿದಂತೆ ಕಳೆದ ಎರಡು ವಾರಗಳಲ್ಲಿ ಇದು ಮೂರನೇ ಘಟನೆಯಾಗಿದ್ದು, ಕಾಶ್ಮೀರದಲ್ಲಿನ ಭಯೋತ್ಪಾದಕ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತವಾಗಿದೆ.
ಕಾಶ್ಮೀರಿ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪಟಿಯಾಲ ಹೌಸ್ ಎನ್‌ಐಎ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಎನ್‌ಐಎ ವಕೀಲರೊಬ್ಬರು ಮಲಿಕ್‌ನನ್ನು ಗಲ್ಲಿಗೇರಿಸಬೇಕೆಂದು ವಾದಿಸಿದರು, ಆದರೆ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು.
Tv Actor Shot Dead By Militants In Budgam



