ಸುಪ್ರೀಂ ಕೋರ್ಟ್ಗೆ ಬೇಷರತ್ ಕ್ಷಮೆಯಾಚಿಸಿದ ತಮಿಳುನಾಡು ವಿಜಯ್ ಸರ್ಕಾರ
ತಿರುಪ್ಪರಂಕುಂದ್ರಂ ಬೆಟ್ಟದ ವಿವಾದಿತ ದೀಪಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗದ ಪ್ರಕರಣ ತಮಿಳುನಾಡಿನಲ್ಲಿ ರಾಜಕೀಯ ಮತ್ತು ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ. ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರ ಬೇಷರತ್ ಕ್ಷಮೆ ಕೇಳಿದ್ದು, ರಾಜ್ಯಪಾಲರೂ ವಿವರಣೆ ಕೇಳಿದ್ದಾರೆ.

- ಸುಪ್ರೀಂ ಕೋರ್ಟ್ಗೆ ಬೇಷರತ್ ಕ್ಷಮೆಯಾಚನೆ
- ದೇವಸ್ಥಾನದ ಟ್ರಸ್ಟಿಗಳಿಂದ ಅನುಮತಿ ನಿರಾಕರಣೆ
- ರಾಜ್ಯಪಾಲರಿಂದ ಸರ್ಕಾರಕ್ಕೆ ವಿವರಣೆ ಕೇಳಿ ಪತ್ರ
ತಮಿಳುನಾಡಿನ (Tamil Nadu) ತಿರುಪ್ಪರಂಕುಂದ್ರಂ ಬೆಟ್ಟದ ಕಾರ್ತಿಕ ದೀಪ ವಿವಾದ ಇದೀಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದರೂ ನವೆಂಬರ್ 24ರಂದು ವಿವಾದಿತ ದೀಪಸ್ತಂಭದಲ್ಲಿ ದೀಪ ಬೆಳಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನ್ಯಾಯಾಲಯದ ಮುಂದೆ ಕ್ಷಮೆಯಾಚಿಸಿದೆ. ನ್ಯಾಯಾಲಯದ ಆದೇಶವನ್ನು ಪಾಲಿಸಲು ಸಾಧ್ಯವಾಗದ ಪರಿಸ್ಥಿತಿಯನ್ನು ವಿವರಿಸಿ ಬೇಷರತ್ ಕ್ಷಮೆ ಕೋರಿದೆ.
ಈ ಬೆಳವಣಿಗೆಗೆ ಸಂಬಂಧಿಸಿದಂತೆ ಮಧುರೈ ಜಿಲ್ಲಾಧಿಕಾರಿ ನಿಶಾಂತ್ ಕೃಷ್ಣ ಅವರು ಸುಪ್ರೀಂ ಕೋರ್ಟ್ಗೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠಕ್ಕೆ ಸಲ್ಲಿಸಿದ ವರದಿಯಲ್ಲಿ, ದೀಪ ಬೆಳಗಿಸಲು ಅಗತ್ಯವಿದ್ದ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿತ್ತು ಎಂದು ತಿಳಿಸಿದ್ದಾರೆ.
ಆದರೆ, ಕೊನೆಯ ಹಂತದಲ್ಲಿ ದೇವಸ್ಥಾನದ ಟ್ರಸ್ಟಿಗಳ ಮಂಡಳಿ (Temple Trust) ದೀಪ ಬೆಳಗಿಸುವ ಕಾರ್ಯಕ್ಕೆ ಅನುಮತಿ ನೀಡಲಿಲ್ಲ. ಸಾಂಪ್ರದಾಯಿಕವಾಗಿ ಯಾವ ಸ್ಥಳದಲ್ಲಿ ಕಾರ್ತಿಕ ಮಹಾದೀಪ ಬೆಳಗಿಸಲಾಗುತ್ತದೆಯೋ ಅದೇ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಟ್ರಸ್ಟಿಗಳು ನಿರ್ಧರಿಸಿದ್ದರು. ಹೀಗಾಗಿ ಸುಪ್ರೀಂ ಕೋರ್ಟ್ ಸೂಚನೆಯಂತೆ ಉದ್ದೇಶಿತ ಸ್ಥಳದಲ್ಲಿ ದೀಪ ಬೆಳಗಿಸಲು ಸಾಧ್ಯವಾಗಲಿಲ್ಲ ಎಂದು ಜಿಲ್ಲಾಧಿಕಾರಿ ವರದಿಯಲ್ಲಿ ವಿವರಿಸಿದ್ದಾರೆ.
ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸುವ ಉದ್ದೇಶ ಸರ್ಕಾರಕ್ಕಾಗಲಿ, ಜಿಲ್ಲಾಡಳಿತಕ್ಕಾಗಲಿ ಇರಲಿಲ್ಲ ಎಂಬುದನ್ನು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಈ ವಿವರಣೆ ಹಾಗೂ ಸಲ್ಲಿಕೆಯಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
ಇನ್ನೊಂದೆಡೆ, ದೀಪ ಬೆಳಗಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದವರ ಪರ ವಾದ ಮಂಡಿಸಿದ ಹಿರಿಯ ವಕೀಲರು ಈ ಬೆಳವಣಿಗೆಯನ್ನು ಅತ್ಯಂತ ದುರದೃಷ್ಟಕರ ಎಂದು ಅಭಿಪ್ರಾಯಪಟ್ಟಿದ್ದಾರೆ. ನ್ಯಾಯಾಲಯದ ಆದೇಶ ಜಾರಿಯಾಗದಿರುವುದಕ್ಕೆ ಹೊಣೆಗಾರರಾದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ (Contempt of Court) ಕ್ರಮ ಕೈಗೊಳ್ಳಬೇಕು ಎಂದು ಅವರು ನ್ಯಾಯಪೀಠವನ್ನು ಒತ್ತಾಯಿಸಿದ್ದಾರೆ.
ರಾಜ್ಯಪಾಲರಿಂದಲೂ ಸರ್ಕಾರಕ್ಕೆ ಪ್ರಶ್ನೆ
ಈ ವಿವಾದಕ್ಕೆ ಈಗ ರಾಜಭವನವೂ ಪ್ರವೇಶಿಸಿದ್ದು, ಸುಪ್ರೀಂ ಕೋರ್ಟ್ ಆದೇಶ ಪಾಲನೆಯಾಗದಿರುವ ಬಗ್ಗೆ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ (Rajendra Arlekar) ಸರ್ಕಾರದಿಂದ ಸ್ಪಷ್ಟನೆ ಕೇಳಿದ್ದಾರೆ. ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿರುವ ರಾಜ್ಯಪಾಲರು, ನ್ಯಾಯಾಲಯದ ಮಧ್ಯಂತರ ಆದೇಶವನ್ನು ಜಾರಿಗೊಳಿಸದಿರುವುದಕ್ಕೆ ಕಾರಣಗಳೇನು ಎಂಬುದನ್ನು ವಿವರವಾಗಿ ತಿಳಿಸುವಂತೆ ಸೂಚಿಸಿದ್ದಾರೆ.
ಈ ಕುರಿತು ಸಮಗ್ರ ವರದಿಯನ್ನು ಸಲ್ಲಿಸುವಂತೆಯೂ ರಾಜ್ಯಪಾಲರು ಸರ್ಕಾರಕ್ಕೆ ತಿಳಿಸಿದ್ದಾರೆ. ಈಗಾಗಲೇ ವಿವಾದದಿಂದ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿರುವಾಗ ರಾಜ್ಯಪಾಲರ ಮಧ್ಯಪ್ರವೇಶ ಮತ್ತಷ್ಟು ಕುತೂಹಲ ಮೂಡಿಸಿದೆ. ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿರುವ ಮುಂದಿನ ವಿಚಾರಣೆ ಮತ್ತು ಸರ್ಕಾರದ ವಿವರಣೆಯ ಮೇಲೆ ಎಲ್ಲರ ಗಮನ ನೆಟ್ಟಿದೆ.



