ಪೊಲೀಸ್ ಠಾಣೆಯ ಶೌಚಾಲಯದಲ್ಲೇ ಮಹಿಳಾ ಸಬ್‌ಇನ್‌ಸ್ಪೆಕ್ಟರ್ ಶವವಾಗಿ ಪತ್ತೆ
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಜರ್ಚಾ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಮಹಿಳಾ ಸಬ್‌ಇನ್‌ಸ್ಪೆಕ್ಟರ್ ಮೃತದೇಹ ಪತ್ತೆಯಾಗಿದೆ. ಸಾವಿನ ಹಿಂದೆ ಹೃದಯಾಘಾತದ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ.

ಉತ್ತರ ಪ್ರದೇಶ: ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಅಧಿಕಾರಿಯೊಬ್ಬರು ತಾವು ಕೆಲಸ ಮಾಡುತ್ತಿದ್ದ ಠಾಣೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಜರ್ಚಾ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಮಹಿಳಾ ಸಬ್‌ಇನ್‌ಸ್ಪೆಕ್ಟರ್ (Woman Sub-Inspector) ರಶ್ಮಿ ಗೌತಮ್ ಅವರ ಮೃತದೇಹ ಪತ್ತೆಯಾಗಿದ್ದು, ಇಲಾಖೆಯ ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ.
2023ನೇ ಬ್ಯಾಚ್‌ನಲ್ಲಿ ಪೊಲೀಸ್ ಉಪನಿರೀಕ್ಷಕಿಯಾಗಿ ಆಯ್ಕೆಯಾಗಿದ್ದ ರಶ್ಮಿ ಗೌತಮ್ ಅವರು ಜರ್ಚಾ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಠಾಣೆಯ ಆವರಣದಲ್ಲಿರುವ ಶೌಚಾಲಯದಲ್ಲಿ ಅವರ ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಹೆಚ್ಚುವರಿ ಪೊಲೀಸ್ ಉಪ ಆಯುಕ್ತರು (ADCP) ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಪರಿಶೀಲನೆಯಲ್ಲಿ ರಶ್ಮಿ ಅವರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ತಿಳಿದುಬಂದಿದೆ.
ಇನ್ನೊಂದೆಡೆ, ಅವರ ಸಾವಿಗೆ ಹೃದಯಾಘಾತ (Heart Attack) ಕಾರಣವಾಗಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆದರೆ ಇದುವರೆಗೂ ಸಾವಿನ ಹಿಂದಿನ ನೈಜ ಕಾರಣ ಖಚಿತವಾಗಿಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮೊದಲು ವೈದ್ಯಕೀಯ ವರದಿಯನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ (Postmortem) ರವಾನಿಸಲಾಗಿದೆ. ವರದಿ ಕೈ ಸೇರಿದ ಬಳಿಕ ಸಾವಿನ ನಿಖರ ಕಾರಣದ ಬಗ್ಗೆ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.
ಪೊಲೀಸ್ ಠಾಣೆಯಲ್ಲೇ ಮಹಿಳಾ ಅಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಕರಣದ ಎಲ್ಲ ಆಯಾಮಗಳನ್ನು ಪರಿಶೀಲಿಸುತ್ತಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




