ಮನೆಯ ಮಹಡಿಯಿಂದ ಕಾಲು ಜಾರಿ ಬಿದ್ದು 11 ವರ್ಷದ ಬಾಲಕ ಸಾವು
ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಕೊಪ್ಪ ಗ್ರಾಮದಲ್ಲಿ ಮನೆಯ ಮಹಡಿಯಿಂದ ಬಿದ್ದು 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ತಲೆಗೆ ಗಂಭೀರ ಗಾಯಗೊಂಡಿದ್ದ ಬಾಲಕನನ್ನು ಮೊದಲು ಸ್ಥಳೀಯ ಆಸ್ಪತ್ರೆಗೆ, ಬಳಿಕ ಮೈಸೂರಿಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಕೊಡಗು (Kodagu): ಮನೆಯ ಮಹಡಿಯಿಂದ ಕೆಳಗೆ ಬಿದ್ದ ಪರಿಣಾಮ 11 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಕುಶಾಲನಗರ ಸಮೀಪದ ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ಗುತ್ತಿಗೆದಾರ ಅರುಣ್ ಅವರ ಪುತ್ರ ಚಿರಂತ್ (11) ಮೃತಪಟ್ಟ ಬಾಲಕ. ಈತ ಮಡಿಕೇರಿ ನವೋದಯ ವಸತಿ ಶಾಲೆಯಲ್ಲಿ (Navodaya Residential School) 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.
ಮನೆಯ ಮಹಡಿಯಿಂದ ಬಿದ್ದ ರಭಸಕ್ಕೆ ಬಾಲಕನ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣವೇ ಆತನನ್ನು ಕುಶಾಲನಗರದ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಗಾಯದ ತೀವ್ರತೆ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ವೈದ್ಯರು ಚಿಕಿತ್ಸೆ ಮುಂದುವರಿಸಿದರೂ ಬಾಲಕನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಕೊಪ್ಪ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.







