ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣ; ಹಂತಕ ಗಿರೀಶ್​ಗೆ ಜೀವಾವಧಿ ಶಿಕ್ಷೆ

Anjali Ambiger Murder Case: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ದೋಷಿ ಎಂದು ಘೋಷಿತನಾದ ಗಿರೀಶ್ ಅಲಿಯಾಸ್ ವಿಶ್ವನಾಥ್ ಸಾವಂತ್‌ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ, ಜೊತೆಗೆ ನಲವತ್ತೈದು ಸಾವಿರ ರೂಪಾಯಿ ದಂಡವನ್ನೂ ವಿಧಿಸಿ ಆದೇಶ ಹೊರಡಿಸಿದೆ

  • ಅಂಜಲಿ ಕೊಲೆ ಪ್ರಕರಣದಲ್ಲಿ ಮಹತ್ವದ ತೀರ್ಪು
  • ಗಿರೀಶ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
  • 45 ಸಾವಿರ ರೂಪಾಯಿ ದಂಡ ಪಾವತಿಗೆ ಆದೇಶ

Anjali Ambiger Murder Case: ಹುಬ್ಬಳ್ಳಿಯಲ್ಲಿ ಭಾರೀ ಸಂಚಲನ ಮೂಡಿಸಿದ್ದ ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಕೊನೆಗೂ ಶಿಕ್ಷೆಯ ತೀರ್ಪು ಹೊರಬಿದ್ದಿದೆ. ಪ್ರಕರಣದ ಆರೋಪಿಯಾಗಿದ್ದ ಗಿರೀಶ್ ಅಲಿಯಾಸ್ ವಿಶ್ವನಾಥ್ ಎಸ್. ಸಾವಂತ್‌ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಇದರೊಂದಿಗೆ 45 ಸಾವಿರ ರೂಪಾಯಿ ದಂಡವನ್ನೂ ವಿಧಿಸಿ ನವೆಂಬರ್ 25ರಂದು ಆದೇಶ ಹೊರಡಿಸಲಾಗಿದೆ.

ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಪಲ್ಲವಿ ಬಿ.ಆರ್. ಅವರು ಈ ತೀರ್ಪು ನೀಡಿದ್ದಾರೆ. ಈಗಾಗಲೇ ನವೆಂಬರ್ 21ರಂದು ಆರೋಪಿಯನ್ನು ದೋಷಿ ಎಂದು ಘೋಷಿಸಿದ್ದ ನ್ಯಾಯಾಲಯ, ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲು ನವೆಂಬರ್ 25ಕ್ಕೆ ವಿಚಾರಣೆಯನ್ನು ಮುಂದೂಡಿತ್ತು. ಇದೀಗ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 451, 302 ಮತ್ತು 201ರ ಅಡಿಯಲ್ಲಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

2024ರ ಮೇ 15ರಂದು ನಡೆದಿತ್ತು ಭೀಕರ ಕೊಲೆ

ಈ ಘಟನೆ 2024ರ ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿತ್ತು. ತನ್ನ ಮನೆಯಲ್ಲಿದ್ದ 20 ವರ್ಷದ ಅಂಜಲಿ ಅಂಬಿಗೇರಳನ್ನು ಆರೋಪಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ. ಅಂಜಲಿ ಮತ್ತು ಗಿರೀಶ್ ನಡುವಿನ ಪ್ರೀತಿ ವಿಚಾರದಲ್ಲಿ ಉಂಟಾಗಿದ್ದ ಮನಸ್ತಾಪವೇ ಕೃತ್ಯಕ್ಕೆ ಕಾರಣವೆಂದು ತನಿಖೆಯಲ್ಲಿ ತಿಳಿದುಬಂದಿತ್ತು. ತನ್ನಿಂದ ದೂರವಾಗಿದ್ದ ಅಂಜಲಿಯನ್ನು ಸಂಪರ್ಕಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.

ಕೊಲೆ ನಡೆದ ಬಳಿಕ ಗಿರೀಶ್ ಸ್ಥಳದಿಂದ ಪರಾರಿಯಾಗಿದ್ದ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದ ವೇಳೆ ದಾವಣಗೆರೆ ಸಮೀಪ ರೈಲ್ವೆ ಪೊಲೀಸರ ನೆರವಿನಿಂದ ವಶಕ್ಕೆ ಪಡೆಯಲಾಗಿತ್ತು. ಚಲಿಸುತ್ತಿದ್ದ ರೈಲಿನಿಂದ ಬಿದ್ದು ಗಾಯಗೊಂಡಿದ್ದ ಆರೋಪಿಗೆ ಚಿಕಿತ್ಸೆ ಕೊಡಿಸಿದ ನಂತರ ಹುಬ್ಬಳ್ಳಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದರು.

ಈ ಪ್ರಕರಣದಲ್ಲಿ ಮತ್ತೊಂದು ಗಂಭೀರ ವಿಚಾರವೂ ಚರ್ಚೆಗೆ ಬಂದಿತ್ತು. ಕೊಲೆಗೂ ಮುನ್ನ ಗಿರೀಶ್‌ನಿಂದ ಬೆದರಿಕೆ ಬರುತ್ತಿರುವ ಬಗ್ಗೆ ಅಂಜಲಿ ದೂರು ನೀಡಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು.

ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (CID) ವಹಿಸಿತ್ತು. ತನಿಖೆ ನಡೆಸಿದ ಅಧಿಕಾರಿಗಳು 2024ರ ಆಗಸ್ಟ್‌ನಲ್ಲಿ ಒಟ್ಟು 494 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸಾಕ್ಷಿಗಳ ಹೇಳಿಕೆ, ತನಿಖಾ ವರದಿ ಹಾಗೂ ಲಭ್ಯವಿದ್ದ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯ ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿತ್ತು.

ಇದೀಗ ಜೀವಾವಧಿ ಶಿಕ್ಷೆಯ ತೀರ್ಪು ಪ್ರಕಟವಾಗಿರುವುದು ಅಂಜಲಿ ಕುಟುಂಬದ ನ್ಯಾಯದ ಹೋರಾಟದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ರಾಜ್ಯದಾದ್ಯಂತ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಹೊರಬಂದಿದೆ.

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories