ಬೈಕ್ ಮತ್ತು ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ! ಬೈಕ್ ಸವಾರ ಸ್ಥಳದಲ್ಲೇ ಸಾವು
ಬೆಳ್ತಂಗಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್ ಮತ್ತು ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆಳ್ತಂಗಡಿ ಸಮೀಪದ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ರವಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಸದಾನಂದ ಆಚಾರ್ (55) ಎಂದು ಗುರುತಿಸಲಾಗಿದೆ. ಅವರು ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸರಾಫರಾಗಿದ್ದರು ಎಂದು ತಿಳಿದುಬಂದಿದೆ. ಅವರ ಪತ್ನಿ ಉಷಾ ಆಚಾರ್ಯ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಗೋಳಿತ್ತೊಟ್ಟು ಜಂಕ್ಷನ್ ಬಳಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ಭಾರೀ ಪರಿಣಾಮದಿಂದ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸದಾನಂದ ಆಚಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಪುತ್ತೂರು ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ.



