ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, 23 ವರ್ಷದ ಯುವಕ ಸ್ಥಳದಲ್ಲೇ ಸಾವು!
ಅಜ್ಜಿಯ ಮನೆಯಿಂದ ಆನಂದಪುರಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ಯುವಕನಿಗೆ ಹೆಬ್ಬೋಡಿ ಬಳಿ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ದುರಂತ ಅಂತ್ಯ ಕಂಡಿದೆ.

- ಹೆಬ್ಬೋಡಿ ಬಳಿ ಭೀಕರ ರಸ್ತೆ ಅಪಘಾತ
- ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ
- ಚಿಕಿತ್ಸೆ ಫಲಿಸದೆ ಯುವಕ ಸಾವು
ಶಿವಮೊಗ್ಗ (Shivamogga): ಸಂಬಂಧಿಕರ ಮನೆಗೆ ಬಂದಿದ್ದ ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಹೆಬ್ಬೋಡಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದೇ ಈ ದುರಂತಕ್ಕೆ ಕಾರಣವಾಗಿದೆ.
ಮೃತನನ್ನು 23 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಶಿರಾಳಗಿ ಗ್ರಾಮದ ಅನ್ವಿಷ್ ಅವರ ಪುತ್ರನಾದ ಗಣೇಶ್, ಸಂಬಂಧಿಕರ ಮನೆಗೆಂದು ಆಡೂರು ಗ್ರಾಮಕ್ಕೆ ಬಂದಿದ್ದರು.
ಸೋಮವಾರ ರಾತ್ರಿ ಅಲ್ಲಿಂದ ಆನಂದಪುರದ ಕಡೆಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಹೆಬ್ಬೋಡಿ ಸಮೀಪ ಅಪಘಾತ ಸಂಭವಿಸಿದೆ. ಈ ವೇಳೆ ಬೈಕ್ ನೇರವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಯುವಕನಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.
ಅಪಘಾತದ ಬಳಿಕ ಗಾಯಾಳು ಗಣೇಶ್ ಅವರನ್ನು ತಕ್ಷಣವೇ ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಆದರೆ ಅವರ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಗಿತ್ತು.
ದುರದೃಷ್ಟವಶಾತ್, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಗಣೇಶ್ ಕೊನೆಯುಸಿರೆಳೆದಿದ್ದಾರೆ. ಯುವಕನ ಸಾವಿನ ಸುದ್ದಿ ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ಆಘಾತ ಮೂಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರವೀಣ್ ಪರಿಶೀಲನೆ ನಡೆಸುತ್ತಿದ್ದಾರೆ.



