ಭೀಕರ ಅಪಘಾತ: ಚೆನ್ನೈ ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ಪಲ್ಟಿ; ಇಬ್ಬರು ಸಾವು, ಐವರಿಗೆ ಗಾಯ
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಐವರಿಗೆ ಗಾಯಗಳಾಗಿವೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ (Chennai Bengaluru Expressway) ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕುಟುಂಬದೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಕಾಳಹಸ್ತಿ ದೇವಸ್ಥಾನದಿಂದ ಕುಟುಂಬ ಬೆಂಗಳೂರಿಗೆ ವಾಪಸಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲಿ ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ಮೃತರನ್ನು ಬೆಂಗಳೂರಿನ ರಾಮಪುರದ ಮೇಘನಾ ಹಾಗೂ ಕಾರು ಚಾಲಕ ಜಯಂತ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಷಣ್ಮುಗ, ಪೂಜಾ, ರಾಜೇಶ್, ಬಾಬು ಮತ್ತು ವಿಜಯಲಕ್ಷ್ಮೀ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ (Local Hospital) ದಾಖಲಿಸಲಾಗಿದೆ.
ಇದನ್ನೂ ಓದಿ: ಭೀಕರ ದುರಂತ: ಕೃಷಿ ಹೊಂಡದಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳು ಸಾವು
ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ (Shivanshu Rajput) ಕೂಡ ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳು ವರದಿಯಾಗುತ್ತಿರುವ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಘಟನೆ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ (Bangarpet Police Station) ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



