ಹಠ ಬಿಡಿ, ಸರ್ಕಾರವನ್ನ ಹೆದರಿಸುವ ಕೆಲಸ ಬೇಡ; ಆಶಾ ಕಾರ್ಯಕರ್ತೆಯರ ಸಮಸ್ಯೆ ಪರಿಹರಿಸುವುದಾಗಿ ಸಿಎಂ ಭರವಸೆ
ರಾಜ್ಯದಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಸಂಜೆ ಭೇಟಿ ಮಾಡುವುದಾಗಿ ತಿಳಿಸಿ, ಪ್ರತಿಭಟನೆ ನಿಲ್ಲಿಸಿ ಸರ್ಕಾರದೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು (Bengaluru): ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಮತ್ತೊಮ್ಮೆ ಮನವಿ ಮಾಡಿದ್ದಾರೆ. ಹೋರಾಟವನ್ನು ಕೈಬಿಟ್ಟು ಸರ್ಕಾರದೊಂದಿಗೆ ಚರ್ಚೆಗೆ ಬರಬೇಕು. ತಮ್ಮ ಬೇಡಿಕೆಗಳನ್ನು ತಿಳಿಸಿದರೆ ಅವುಗಳನ್ನು ಪರಿಶೀಲಿಸಿ ಪರಿಹಾರ ನೀಡಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಕುರಿತು ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು. ಶುಕ್ರವಾರ ಸಂಜೆ ತಾವು ಬೆಂಗಳೂರಿಗೆ ಬಂದ ಬಳಿಕ ಕಾರ್ಯಕರ್ತೆಯರನ್ನು ಭೇಟಿಯಾಗಿ ಮಾತನಾಡುವುದಾಗಿ ಭರವಸೆ ನೀಡಿದರು.
ಆಶಾ ಕಾರ್ಯಕರ್ತೆಯರ ಸೇವೆಯನ್ನು ಸರ್ಕಾರ ಗೌರವಿಸುತ್ತದೆ. ಮಹಿಳೆಯರ ಕಷ್ಟ ಮತ್ತು ಕುಟುಂಬದ ಜವಾಬ್ದಾರಿಗಳ ಬಗ್ಗೆ ತನಗೆ ಅರಿವಿದೆ ಎಂದು ಹೇಳಿದ ಸಿಎಂ, ಪ್ರತಿಭಟನೆಯನ್ನು ಮುಂದುವರಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಸರ್ಕಾರದ ಮೇಲೆ ನಂಬಿಕೆ ಇಟ್ಟು ಮಾತುಕತೆಗೆ ಮುಂದಾಗುವಂತೆ ಮನವಿ ಮಾಡಿದರು.
ಈ ವಿಚಾರದಲ್ಲಿ ಕೆಲವರು ರಾಜಕೀಯ ಮಾಡುತ್ತಿದ್ದಾರೆ ಎಂದೂ ಅವರು ಹೇಳಿದರು. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳಂತೆ ಸರ್ಕಾರ ಕೆಲಸ ಮಾಡುತ್ತಿದೆ. ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನೂ ಗಂಭೀರವಾಗಿ ಪರಿಗಣಿಸಲಾಗುವುದು. ಅವರ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು.
ಸಚಿವರಾದ ಖಾದರ್ ಮತ್ತು ನರೇಂದ್ರಸ್ವಾಮಿ ಅವರ ಹೇಳಿಕೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಂತಹ ಹೇಳಿಕೆಗಳು ಸರಿಯಲ್ಲ ಎಂದರು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂಬ ನಿಲುವನ್ನು ವ್ಯಕ್ತಪಡಿಸಿದರು.
ಕಾಡಾನೆ ಸಮಸ್ಯೆಗೂ ಪರಿಹಾರದ ಭರವಸೆ
ಇದೇ ವೇಳೆ ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ಜನರು ಎದುರಿಸುತ್ತಿರುವ ತೊಂದರೆಗಳ ಬಗ್ಗೆಯೂ ಮುಖ್ಯಮಂತ್ರಿ ಮಾತನಾಡಿದರು. ಆನೆಗಳನ್ನು ನಿಯಂತ್ರಿಸುವುದು ಸುಲಭದ ಕೆಲಸವಲ್ಲ. ಅವು ಮನೆ ಮತ್ತು ತೋಟಗಳಿಗೆ ನುಗ್ಗಿದಾಗ ಜನರಿಗೆ ಆಗುವ ನಷ್ಟದ ಬಗ್ಗೆ ಸರ್ಕಾರಕ್ಕೆ ಅರಿವಿದೆ ಎಂದು ಹೇಳಿದರು.
ಈ ಸಮಸ್ಯೆ ಕುರಿತು ಚಿಕ್ಕಮಗಳೂರು ಶಾಸಕರು ಮನವಿ ಮಾಡಿರುವುದರಲ್ಲಿ ತಪ್ಪಿಲ್ಲ. ಆದರೆ ತಕ್ಷಣಕ್ಕೆ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಅಧಿಕಾರಿಗಳು ಮತ್ತು ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.



