ಸರ್ಕಾರಿ ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಯಿದ್ದರೂ ಮುಚ್ಚಲ್ಲ: ಮಧು ಬಂಗಾರಪ್ಪ
ಪೋಷಕರಿಗೆ ಇಂಗ್ಲಿಷ್ ಮಾಧ್ಯಮ ಆಯ್ಕೆ ಸ್ವಾತಂತ್ರ್ಯ ನೀಡಲಾಗಿದ್ದು, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಶಿಕ್ಷಕರ ನೇಮಕಾತಿ, ಉಚಿತ ಬಸ್ ಮತ್ತು ನೋಟ್ಬುಕ್ ವಿತರಣೆಗೆ ಸರ್ಕಾರ ಸಿದ್ಧತೆ ನಡೆಸಿದೆ.

- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಡ್ಡಾಯವಲ್ಲ
- ಒಬ್ಬ ವಿದ್ಯಾರ್ಥಿಯಿದ್ದರೂ ಶಾಲೆ ಮುಂದುವರಿಕೆ
- 17 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿ
ರಾಯಚೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಶಾಲೆಗಳನ್ನು ಮುಚ್ಚುವ ಅಥವಾ ಬೇರೆ ಶಾಲೆಗಳೊಂದಿಗೆ ವಿಲೀನಗೊಳಿಸುವ ನಿರ್ಧಾರ ಸರ್ಕಾರದ ಮುಂದಿಲ್ಲ. ಒಬ್ಬ ವಿದ್ಯಾರ್ಥಿ ಮಾತ್ರ ಇದ್ದರೂ ಆ ಶಾಲೆಯನ್ನು ಮುಂದುವರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸ್ಪಷ್ಟಪಡಿಸಿದ್ದಾರೆ.
ನಗರದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆದ ಕಲಬುರಗಿ ವಿಭಾಗದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶ ಸುಧಾರಣಾ ಕಾರ್ಯಾಗಾರದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಮಾಧ್ಯಮದಲ್ಲೂ ಶಿಕ್ಷಣ ಪಡೆಯಲು ಅವಕಾಶವಿದೆ. ಆದರೆ, ಇಂಗ್ಲಿಷ್ ಕಲಿಕೆಯನ್ನು ಎಲ್ಲ ಮಕ್ಕಳಿಗೂ ಕಡ್ಡಾಯಗೊಳಿಸುವುದಿಲ್ಲ. ಯಾವ ಮಾಧ್ಯಮದಲ್ಲಿ ಮಕ್ಕಳು ಓದಬೇಕು ಎಂಬುದನ್ನು ಪೋಷಕರೇ ನಿರ್ಧರಿಸಬಹುದು ಎಂದು ತಿಳಿಸಿದರು.
ಸರ್ಕಾರಿ ಶಿಕ್ಷಣ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ತರಲು ಇಲಾಖೆ ಮುಂದಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಕೆಜಿಯಿಂದ 12ನೇ ತರಗತಿವರೆಗಿನ ಮಕ್ಕಳಿಗೆ ಉಚಿತ ನೋಟ್ಬುಕ್ (Free Notebooks) ನೀಡಲು ತೀರ್ಮಾನಿಸಲಾಗಿದೆ. ಅಲ್ಲದೆ, ರಾಜ್ಯದಲ್ಲಿ 1,300ಕ್ಕೂ ಹೆಚ್ಚು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (KPS Schools) ಆರಂಭಿಸುವ ಸಿದ್ಧತೆ ನಡೆಯುತ್ತಿದೆ. ಜೂನ್ 1ರಿಂದ ಕೆಪಿಎಸ್ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯವೂ ದೊರೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು.
ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿಯೂ ನೇಮಕಾತಿ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ರಾಜ್ಯದಲ್ಲಿ 17 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಅನುದಾನಿತ ಶಾಲೆಗಳಲ್ಲೂ 5,500ರಿಂದ 6 ಸಾವಿರ ಶಿಕ್ಷಕರನ್ನು ನೇಮಿಸಲು ಸರ್ಕಾರ ಉದ್ದೇಶಿಸಿದೆ. ಪಿಯುಸಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ 36 ಸಾವಿರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡುವ ಯೋಜನೆಯೂ ಇದೆ ಎಂದು ವಿವರಿಸಿದರು.
ಇದೇ ವೇಳೆ ಸರ್ಕಾರಿ ಶಾಲೆಗಳ ಶೈಕ್ಷಣಿಕ ಸಾಧನೆಯ ಬಗ್ಗೆಯೂ ಸಚಿವರು ಮಾಹಿತಿ ಹಂಚಿಕೊಂಡರು. ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆಗಳ ಫಲಿತಾಂಶ ಶೇ.0.2ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು. ಈ ಬಾರಿ ಫಲಿತಾಂಶವನ್ನು ಮತ್ತಷ್ಟು ಉತ್ತಮಪಡಿಸಿ ಶೇ.100ರ ಗುರಿ ತಲುಪಲು ’60 ಪ್ಲಸ್ ಮಿಷನ್’ (60 Plus Mission) ಜಾರಿಗೆ ತರಲಾಗಿದೆ ಎಂದರು.
ವಿದ್ಯಾರ್ಥಿಗಳಲ್ಲಿ ಓದಿನ ಜೊತೆಗೆ ಉತ್ತಮ ನಡವಳಿಕೆ ಮತ್ತು ನೈತಿಕ ಜವಾಬ್ದಾರಿ ಬೆಳೆಸಲು ನೀತಿ ವಿಜ್ಞಾನ ಪುಸ್ತಕಗಳನ್ನು ವಿತರಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕದ ಶಾಲೆಗಳ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಅನುದಾನ ಬಳಸಿಕೊಳ್ಳಲಾಗುತ್ತಿದೆ. ಶಿಕ್ಷಣ ಇಲಾಖೆಯಲ್ಲಿರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಿ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವುದು ಸರ್ಕಾರದ ಉದ್ದೇಶ ಎಂದು ಮಧು ಬಂಗಾರಪ್ಪ ಹೇಳಿದರು.



