DK Shivakumar । ಹಾವೇರಿ ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸರ ಹೆಸರು; ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
DK Shivakumar: ಹಾವೇರಿಯಲ್ಲಿ ಕನಕದಾಸರ ಜಯಂತ್ಯೋತ್ಸವದ ವೇದಿಕೆಯಿಂದ ಮಹತ್ವದ ಘೋಷಣೆ ಹೊರಬಿದ್ದಿದೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದಲ್ಲಿ ಮೀಸಲಾತಿ, ವಿದ್ಯಾರ್ಥಿನಿಲಯಕ್ಕೆ ಅನುದಾನ ಹಾಗೂ ಮೆಡಿಕಲ್ ಕಾಲೇಜಿಗೆ ಹೊಸ ಹೆಸರು ನೀಡುವ ಭರವಸೆ ಸಿಕ್ಕಿದೆ.

- ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಮೀಸಲಾತಿ
- ಹಾವೇರಿ ಮೆಡಿಕಲ್ ಕಾಲೇಜಿಗೆ ಕನಕದಾಸರ ಹೆಸರು
- ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ 5 ಕೋಟಿ ಅನುದಾನ
ಹಾವೇರಿ (Haveri): ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಪ್ರವೇಶದಲ್ಲಿ ಶೇ.7.5ರಷ್ಟು ಮೀಸಲಾತಿ (Reservation) ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ಇದರ ಜೊತೆಗೆ ಹಾವೇರಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸಂತ ಕನಕದಾಸರ (Kanakadasa) ಹೆಸರಿಡುವ ಘೋಷಣೆಯೂ ಹೊರಬಿದ್ದಿದೆ. ಈ ಮೂಲಕ ಶಿಕ್ಷಣ ಮತ್ತು ಸಾಮಾಜಿಕ ಸಮಾನತೆಗೆ ಸಂಬಂಧಿಸಿದ ಹಲವು ವಿಚಾರಗಳು ಕಾಗಿನೆಲೆಯ ಕಾರ್ಯಕ್ರಮದಲ್ಲಿ ಗಮನ ಸೆಳೆದಿವೆ.
ನವೆಂಬರ್ 27ರಂದು ಕಾಗಿನೆಲೆಯ ಕನಕ ಗುರುಪೀಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar), ಕನಕದಾಸರ ಅಧಿಷ್ಠಾನಕ್ಕೆ ಗೌರವ ಸಲ್ಲಿಸಿದರು. ಬಳಿಕ ನಿರಂಜನಾನಂದಪುರಿ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆದ ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾಗಿನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್ ನಿರ್ಮಿಸಲು 5 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದರು. ಶ್ರೀಗಳು ಪ್ರಸ್ತಾಪಿಸಿರುವ ಭೂಮಿ ಸೇರಿದಂತೆ ಇತರ ಬೇಡಿಕೆಗಳನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ಕಾಗಿನೆಲೆಯನ್ನು ಕೇವಲ ಧಾರ್ಮಿಕ ಕ್ಷೇತ್ರವಾಗಿ ಉಳಿಸದೆ, ದೇಶ-ವಿದೇಶಗಳ ಪ್ರವಾಸಿಗರು ಭೇಟಿ ನೀಡುವ ಪ್ರಮುಖ ತಾಣವನ್ನಾಗಿ ರೂಪಿಸುವ ಗುರಿಯನ್ನೂ ಸರ್ಕಾರ ಹೊಂದಿದೆ. ಈಗಾಗಲೇ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಸುಮಾರು 35 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ
ಗ್ರಾಮೀಣ ಭಾಗದ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಇನ್ನಷ್ಟು ಅವಕಾಶ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಅದರ ಭಾಗವಾಗಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳ ಪ್ರವೇಶದಲ್ಲಿ ಶೇ.7.5 ಮೀಸಲಾತಿ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯ ನೀರಾವರಿ ಯೋಜನೆಗಳ ಬಗ್ಗೆಯೂ ಮಾತನಾಡಿದರು. ಜಿಲ್ಲೆಯ ಶಾಸಕರು ಪ್ರಸ್ತಾಪಿಸಿರುವ ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಗೆ 115 ಕೋಟಿ ರೂಪಾಯಿಗೂ ಅಧಿಕ ಅನುದಾನ ನೀಡಲು ಅನುಮೋದನೆ ದೊರೆತಿದೆ ಎಂದು ಮಾಹಿತಿ ನೀಡಿದರು.
ಕನಕದಾಸರ ವಿಚಾರಧಾರೆ ಎಲ್ಲರಿಗೂ ಸೇರಿದ್ದು
ಕನಕದಾಸರನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸುವುದು ಸರಿಯಲ್ಲ ಎಂಬ ಅಭಿಪ್ರಾಯವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದರು. ತಮ್ಮ ಕೀರ್ತನೆಗಳ ಮೂಲಕ ಜಾತಿ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ್ದ ಕನಕದಾಸರು, ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯತೆಯ ಮಹತ್ವ ಸಾರಿದ್ದರು ಎಂದು ಸ್ಮರಿಸಿದರು.
ಬಸವಣ್ಣ, ಕನಕದಾಸರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳು ಇಡೀ ಸಮಾಜಕ್ಕೆ ದಾರಿದೀಪವಾಗಿವೆ. ಆತ್ಮಕ್ಕೆ ಜಾತಿ ಎಂಬ ಭೇದವಿಲ್ಲ ಎನ್ನುವ ಸಂದೇಶವನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಅವರ ಆದರ್ಶಗಳನ್ನು ಕೇವಲ ಜಯಂತಿಗಳಿಗೆ ಸೀಮಿತಗೊಳಿಸದೆ ದೈನಂದಿನ ಬದುಕಿನಲ್ಲೂ ಪಾಲಿಸಬೇಕು ಎಂದು ಕರೆ ನೀಡಿದರು.
ಹಸಿದವರಿಗೆ ಅನ್ನ ನೀಡುವ ಕನಕದಾಸರ ಆಶಯಕ್ಕೆ ಅನುಗುಣವಾಗಿ ಅನ್ನಭಾಗ್ಯ ಯೋಜನೆ (Anna Bhagya Scheme) ಜಾರಿಯಲ್ಲಿದೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ 4.21 ಕೋಟಿ ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಯೋಜನೆಗಾಗಿ ವಾರ್ಷಿಕ ಸುಮಾರು 8,500 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದರು.
ಇದಲ್ಲದೆ ಜನಸಾಮಾನ್ಯರ ಆರ್ಥಿಕ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರದ ಕಾರ್ಯಕ್ರಮಗಳನ್ನು ವಿವರಿಸಿದರು.





