ಕರ್ನಾಟಕ ಹವಾಮಾನ: ಬೆಂಗಳೂರು ಬಿಸಿಲಿನ ಹೊಡೆತ ಹೆಚ್ಚಳ! ಈ ಜಿಲ್ಲೆಗಳಿಗೆ ಭಾರೀ ಎಚ್ಚರಿಕೆ

Karnataka Weather: ರಾಜ್ಯದ ಹಲವೆಡೆ ಉಷ್ಣ ಅಲೆ ತೀವ್ರವಾಗಿದ್ದು, ಕರಾವಳಿ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಬಿಸಿಲಿನ ತೀವ್ರತೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು, ಏಪ್ರಿಲ್ 18: ರಾಜ್ಯದಾದ್ಯಂತ ಬೇಸಿಗೆ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳಿಂದ ಕರ್ನಾಟಕ ಹವಾಮಾನ (Karnataka Weather) ಸ್ಥಿತಿ ಉಷ್ಣ ಅಲೆ ಪರಿಣಾಮದಿಂದ ಬದಲಾಗಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಿ ದಾಖಲಾಗುತ್ತಿದೆ. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಉಷ್ಣತೆಯ ತೀವ್ರತೆ ಜನರಿಗೆ ಕಾಡುತ್ತಿದೆ.

ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ವಿಶೇಷವಾಗಿ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ತಾಪಮಾನ 40 ರಿಂದ 45 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಬಹುದೆಂಬ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ

ಕರಾವಳಿ ಪ್ರದೇಶಗಳು ಈಗಾಗಲೇ ಬಿಸಿಲಿನ ಹೊಡೆತಕ್ಕೆ ತತ್ತರಿಸಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಇನ್ನಷ್ಟು ಏರಬಹುದು ಎಂದು ತಜ್ಞರು ಹೇಳಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಉಷ್ಣತೆ ಹೆಚ್ಚಿದ್ದು, ಕೆಲವು ಭಾಗಗಳಲ್ಲಿ ಅಲ್ಪ ಪ್ರಮಾಣದ ಮಳೆಯ ಸಾಧ್ಯತೆಯೂ ಇದೆ.

ಇದಕ್ಕೆ ಜೊತೆಗೆ ವಿಜಯಪುರ, ಕಲಬುರಗಿ, ಬೀದರ್ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೂ ಹೀಟ್ ವೇವ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ದಿನದ ಹೊತ್ತಿನಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.

ಉಷ್ಣಾಘಾತದಿಂದ ರಕ್ಷಿಸಿಕೊಳ್ಳುವ ಸಲಹೆಗಳು

ತಾಪಮಾನ ಹೆಚ್ಚಳದ ಹಿನ್ನೆಲೆ ಆರೋಗ್ಯ ಇಲಾಖೆ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ತಿಳಿಸಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಲು ಸಲಹೆ ನೀಡಲಾಗಿದೆ. ವಿಶೇಷವಾಗಿ ಮಕ್ಕಳು ಮತ್ತು ಹಿರಿಯರು ಬಿಸಿಲಿನಲ್ಲಿ ಹೆಚ್ಚು ಕಾಲ ಇರುವುದನ್ನು ತಪ್ಪಿಸುವುದು ಉತ್ತಮ ಎಂದು ವೈದ್ಯರು ಹೇಳಿದ್ದಾರೆ.

ದೇಹದಲ್ಲಿ ನೀರಿನ ಕೊರತೆ ಉಂಟಾಗದಂತೆ ಆಗಾಗ ನೀರು ಕುಡಿಯಬೇಕು. ಎಳನೀರು, ಮಜ್ಜಿಗೆ ಅಥವಾ ಹಣ್ಣಿನ ರಸಗಳನ್ನು ಸೇವಿಸುವುದು ಆರೋಗ್ಯಕರ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿ ಬಳಸಿ ಹಾಗೂ ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸುವುದು ಉತ್ತಮ. ಕಾಫಿ, ಟೀ ಅಥವಾ ಹೆಚ್ಚಿನ ಸಕ್ಕರೆಯ ಪಾನೀಯಗಳನ್ನು ಕಡಿಮೆ ಮಾಡುವುದರಿಂದ ದೇಹ ನಿರ್ಜಲೀಕರಣವಾಗುವುದನ್ನು ತಡೆಯಬಹುದು.

ಕೆಲವು ಜಿಲ್ಲೆಗಳಲ್ಲಿ ಒಣ ಹವಾಮಾನ

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

ಇನ್ನೊಂದೆಡೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

Related Stories