ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕು! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಾಗಿದೆ.

ಬೆಂಗಳೂರು (Bengaluru): ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು (Karnataka Rains) ಚಟುವಟಿಕೆ ತೀವ್ರಗೊಂಡಿದ್ದು, ಮುಂದಿನ ಕೆಲ ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಇನ್ನೊಂದೆಡೆ, ರಾಜ್ಯದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು ಸೇರಿದಂತೆ ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ಉತ್ತರ ಒಳನಾಡಿನ ಹಲವು ಭಾಗಗಳಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕೆಲವೆಡೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಗುಡುಗು ಮಳೆಯಾಗುವ ಸಾಧ್ಯತೆ ಇರುವುದರಿಂದ ರೈತರು, ವಾಹನ ಸವಾರರು ಮತ್ತು ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಮನವಿ ಮಾಡಿದೆ.
ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಳೆಯ ಅವಧಿಯಲ್ಲಿ ವಿದ್ಯುತ್ ಕಂಬಗಳು, ಮರಗಳ ಸಮೀಪ ನಿಲ್ಲದಂತೆ ತಜ್ಞರು ಸಲಹೆ ನೀಡಿದ್ದಾರೆ.



