Karnataka Weather: ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಎಚ್ಚರಿಕೆ; 15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಅಲರ್ಟ್
Karnataka Weather: ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ ಮಳೆ, ಬಿರುಗಾಳಿ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಹಾಗೂ ಬಲವಾದ ಗಾಳಿ ಮುಂದುವರಿಯುವ ಸಾಧ್ಯತೆ (Karnataka Weather) ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಕಂಡುಬರುವ ನಿರೀಕ್ಷೆಯಿದ್ದು, ಸಾರ್ವಜನಿಕರು ಅನಗತ್ಯವಾಗಿ ಹೊರ ಸಂಚರಿಸದಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಇನ್ನೂ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಜೊತೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ನದಿ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ್, ಬೀದರ್, ಕಲಬುರಗಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಕಡಿಮೆ ಇದ್ದರೂ, ಬಿರುಗಾಳಿಯಂತಹ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿಯೂ ಗಾಳಿಯ ವೇಗ ಹೆಚ್ಚಾಗಲಿದ್ದು, ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಬಹುದು ಎಂದು ಇಲಾಖೆ ತಿಳಿಸಿದೆ.
ಇದರ ಜೊತೆಗೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಮರಗಳು ಉರುಳುವುದು, ವಿದ್ಯುತ್ ಕಂಬಗಳಿಗೆ ಹಾನಿಯಾಗುವುದು ಸೇರಿದಂತೆ ಸ್ಥಳೀಯ ಮಟ್ಟದಲ್ಲಿ ತೊಂದರೆಗಳು ಎದುರಾಗುವ ಸಾಧ್ಯತೆ ಇರುವುದರಿಂದ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.
ಮಳೆ ಮತ್ತು ಗಾಳಿಯ ತೀವ್ರತೆ ಹೆಚ್ಚಾಗುವ ಸಂದರ್ಭಗಳಲ್ಲಿ ತೆರವಾದ ಪ್ರದೇಶಗಳಲ್ಲಿ ನಿಲ್ಲುವುದು, ದೊಡ್ಡ ಮರಗಳ ಕೆಳಗೆ ಆಶ್ರಯ ಪಡೆಯುವುದು ಹಾಗೂ ಅನಗತ್ಯ ಪ್ರಯಾಣ ಮಾಡುವುದನ್ನು ಸಾಧ್ಯವಾದಷ್ಟು ತಪ್ಪಿಸುವುದು ಸುರಕ್ಷತೆಗೆ ಅಗತ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ.



