ಕರ್ನಾಟಕದಲ್ಲಿ ಮುಂದಿನ 7 ದಿನ ಮಳೆಯ ಅಬ್ಬರ! ಬೆಂಗಳೂರು ಸೇರಿದಂತೆ ಭಾರಿ ಮಳೆ
Karnataka Weather: ಕರ್ನಾಟಕದಲ್ಲಿ ಮುಂದಿನ ಏಳು ದಿನ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ವ್ಯಕ್ತವಾಗಿದೆ.

Karnataka Weather: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಏಳು ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಜೊತೆಗೆ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ಜೂನ್ 30ರಿಂದ ಜುಲೈ 3ರವರೆಗೆ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ವಿಶೇಷವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ ಹಲವು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 27ರಿಂದ ಆರಂಭವಾಗಿ ನಿರಂತರ ಮಳೆಯ ಜೊತೆಗೆ ಕೆಲವೆಡೆ ಗುಡುಗು, ಸಿಡಿಲು ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಜುಲೈ ಮೊದಲ ವಾರದಲ್ಲಿಯೂ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿಯುವ ಲಕ್ಷಣಗಳಿವೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ವಾರಪೂರ್ತಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಕೆಲವೆಡೆ ಗುಡುಗು ಮತ್ತು ಬಿರುಗಾಳಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕೆಲ ಪ್ರದೇಶಗಳಲ್ಲಿ ಸಂಜೆ ವೇಳೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ಇಲಾಖೆ ನಿರಾಕರಿಸಿಲ್ಲ. ಆದರೆ ಈ ಭಾಗದಲ್ಲಿ ವ್ಯಾಪಕ ಭಾರೀ ಮಳೆಯ ಎಚ್ಚರಿಕೆ ನೀಡಿಲ್ಲ.
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಜೂನ್ 29ರವರೆಗೆ ಸಾಧಾರಣ ಮಳೆಯ ವಾತಾವರಣ ಮುಂದುವರಿಯಲಿದ್ದು, ಬಳಿಕ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಜೂನ್ ಅಂತ್ಯ ಹಾಗೂ ಜುಲೈ ಆರಂಭದಲ್ಲಿ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮಳೆ ಮತ್ತು ಗುಡುಗು ಸಿಡಿಲಿನ ಎಚ್ಚರಿಕೆ ಹಿನ್ನೆಲೆಯಲ್ಲಿ ರೈತರು, ಮೀನುಗಾರರು ಹಾಗೂ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುಡುಗು ಸಿಡಿಲಿನ ವೇಳೆ ಮರಗಳ ಕೆಳಗೆ ನಿಲ್ಲಬಾರದು, ವಿದ್ಯುತ್ ಕಂಬಗಳು ಹಾಗೂ ಹಳೆಯ ಕಟ್ಟಡಗಳ ಸಮೀಪ ಆಶ್ರಯ ಪಡೆಯದಂತೆ ಸಲಹೆ ನೀಡಲಾಗಿದೆ.



