ಗೋವಾ ಪ್ರವಾಸಕ್ಕೆ ಹೊರಟಿದ್ದ ಬಸ್ ಪಲ್ಟಿ: ಇಬ್ಬರು ದುರ್ಮರಣ! 26 ಮಂದಿಗೆ ಗಾಯ
ಚಿತ್ರದುರ್ಗದ ಹಿರಿಯೂರು ತಾಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದು, 26 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಚಿತ್ರದುರ್ಗ: ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 26 ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಸಮೀಪ ನಡೆದಿದೆ.
ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಾತ್ರಿ ವೇಳೆ ಅಪಘಾತಕ್ಕೀಡಾಗಿದೆ. ಬಸ್ನಲ್ಲಿ ಬೆಂಗಳೂರಿನ ಯುನಿವರ್ಸಲ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 56 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಬಸ್ ಚಾಲಕ ಗುರು ಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಮೃತಪಟ್ಟಿದ್ದಾರೆ. ಗಾಯಗೊಂಡ 26 ಮಂದಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 28 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು ಮಾಹಿತಿ ನೀಡಿದ್ದಾರೆ.
ಅಪಘಾತದ ತೀವ್ರತೆ ಎಷ್ಟಿತ್ತು ಎಂಬುದನ್ನು ಗಾಯಗೊಂಡ ವಿದ್ಯಾರ್ಥಿನಿಯೊಬ್ಬರು ವಿವರಿಸಿದ್ದಾರೆ. ರಾತ್ರಿ ಸುಮಾರು 10.30ರ ವೇಳೆಗೆ ಬಹುತೇಕ ಎಲ್ಲರೂ ನಿದ್ರಿಸುತ್ತಿದ್ದಾಗ ಏಕಾಏಕಿ ದೊಡ್ಡ ಶಬ್ದ ಕೇಳಿಸಿತು. ಬಸ್ ಡಿಕ್ಕಿಯಾದ ಬಳಿಕ ಪ್ರಯಾಣಿಕರು ಭಯದಿಂದ ಕಿರುಚಲು ಆರಂಭಿಸಿದರು ಎಂದು ಅವರು ಹೇಳಿದ್ದಾರೆ.
ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ನೆರವಿಗೆ ಬಂದಿದ್ದಾರೆ. ಬಸ್ನ ಗಾಜುಗಳನ್ನು ಒಡೆದು ಒಳಗಿದ್ದವರನ್ನು ಹೊರಗೆ ಕರೆತಂದು ರಕ್ಷಣಾ ಕಾರ್ಯಕ್ಕೆ ಸಹಕರಿಸಿದ್ದಾರೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ.
ಘಟನೆ ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.



