ಹಿರಿಯೂರಿನ ಜನರಿಗೆ ಡಿಕೆಶಿ ಭರ್ಜರಿ ಕೊಡುಗೆ; ಅಭಿವೃದ್ಧಿಗೆ 2,000 ಕೋಟಿ ಯೋಜನೆ ಘೋಷಣೆ
ಕ್ಷೇತ್ರದ ಜನರ ವಿಶ್ವಾಸಕ್ಕೆ ಅಭಿವೃದ್ಧಿ ಕೆಲಸಗಳ ಮೂಲಕ ಪ್ರತಿಫಲ ನೀಡುತ್ತೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಹಿರಿಯೂರಿನಲ್ಲಿ ನೀರಾವರಿ, ವಸತಿ ಸೇರಿದಂತೆ ಹಲವು ಯೋಜನೆಗಳಿಗೆ ಆದ್ಯತೆ ನೀಡುವುದಾಗಿ ಘೋಷಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar), ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ತಿಳಿಸಿದರು.
ನನಗೆ ಕನಕಪುರ ಕ್ಷೇತ್ರ ಎಷ್ಟು ಮುಖ್ಯವೋ, ಹಿರಿಯೂರು ಕೂಡ ಅಷ್ಟೇ ಮುಖ್ಯ. ಇಲ್ಲಿನ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವುದು ನಮ್ಮ ಜವಾಬ್ದಾರಿ. ಜನರು ನೀಡಿರುವ ಮತಕ್ಕೆ ಸೇವೆಯ ಮೂಲಕ ಗೌರವ ಸಲ್ಲಿಸುತ್ತೇವೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ದಿವಂಗತ ಮಾಜಿ ಸಚಿವ ಡಿ. ಸುಧಾಕರ್ ಅವರನ್ನು ಸ್ಮರಿಸಿದ ಅವರು, ಹಿರಿಯೂರಿನ ಅಭಿವೃದ್ಧಿ ಕುರಿತು ಸುಧಾಕರ್ ಹೊಂದಿದ್ದ ಕನಸುಗಳನ್ನು ನನಸು ಮಾಡುವುದು ತಮ್ಮ ಜವಾಬ್ದಾರಿ ಎಂದರು. ಕ್ಷೇತ್ರದ ಜನರ ಮೇಲಿದ್ದ ಅವರ ಪ್ರೀತಿ ಮತ್ತು ಕಾಳಜಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದರು.
ಹಿರಿಯೂರಿನಲ್ಲಿ ಈಗಾಗಲೇ ಸುಮಾರು 2,000 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ವಾಣಿ ವಿಲಾಸ ಕಾಲುವೆ ನವೀಕರಣಕ್ಕೆ 1,900 ಕೋಟಿ ರೂಪಾಯಿ ಯೋಜನೆ ರೂಪಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ಹರಿಸುವುದು ಸೇರಿದಂತೆ ನೀರಾವರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇದಲ್ಲದೆ, ಕ್ಷೇತ್ರದಲ್ಲಿ ಬಡ ಕುಟುಂಬಗಳಿಗೆ 3,000 ಮನೆಗಳನ್ನು ಒದಗಿಸಲು ವಸತಿ ಇಲಾಖೆ ನಿರ್ಧರಿಸಿದೆ. ಸ್ವಂತ ನಿವೇಶನ ಇಲ್ಲದವರಿಗೆ 30X40 ಅಡಿ ಅಳತೆಯ ನಿವೇಶನ ನೀಡುವ ಯೋಜನೆಯೂ ಸರ್ಕಾರದ ಮುಂದಿದೆ. ಈ ನಿವೇಶನಗಳನ್ನು ಮಹಿಳೆಯರ ಹೆಸರಿನಲ್ಲಿ ಅಥವಾ ಪತಿ-ಪತ್ನಿ ಜಂಟಿ ಹೆಸರಿನಲ್ಲಿ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರಬಹುದು. ಗೃಹಲಕ್ಷ್ಮಿ ಯೋಜನೆಯ ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆ ಮತ್ತು ಮೊಬೈಲ್ ಸಂಖ್ಯೆಗಳ ವಿವರಗಳಲ್ಲಿ ವ್ಯತ್ಯಾಸಗಳಿರುವುದರಿಂದ ಪರಿಶೀಲನೆ ನಡೆಸಲಾಗುತ್ತಿದೆ. ಅರ್ಹರಿಗೆ ಸೌಲಭ್ಯ ತಲುಪಿಸುವುದೇ ಇದರ ಉದ್ದೇಶ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಬರ ಪರಿಹಾರ ಬಿಡುಗಡೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಕರ್ನಾಟಕಕ್ಕೆ ಬರ ಪರಿಹಾರದ ಹಣ ಇನ್ನೂ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು. ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಘೋಷಿಸಿದ್ದ ಅನುದಾನವೂ ಬಂದಿಲ್ಲ ಎಂದು ಪ್ರಸ್ತಾಪಿಸಿದರು. ಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರದಲ್ಲಿ ಮತ್ತೆ ಪ್ರಯತ್ನ ಮುಂದುವರಿಸುವುದಾಗಿಯೂ ಹೇಳಿದರು.




