ಕರ್ನಾಟಕ: 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ!
ಮಕ್ಕಳ ಮೇಲೆ ಸೋಶಿಯಲ್ ಮೀಡಿಯಾದ ದುಷ್ಪರಿಣಾಮ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಬಳಕೆಗೆ ನಿಷೇಧ ತರಲು ಕರ್ನಾಟಕ ಸರ್ಕಾರ ನಿರ್ಧರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.

ಬೆಂಗಳೂರು (Bengaluru): ಮಕ್ಕಳಲ್ಲಿ ಸೋಶಿಯಲ್ ಮೀಡಿಯಾ ಬಳಕೆ ಹೆಚ್ಚುತ್ತಿರುವುದು ಅವರ ಓದು ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂಬ ಆತಂಕದ ಹಿನ್ನೆಲೆ ಕರ್ನಾಟಕ ಸರ್ಕಾರ (Karnataka Government) ಮಹತ್ವದ ನಿರ್ಧಾರ ಕೈಗೊಂಡಿದೆ. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆಯನ್ನು ನಿಷೇಧಿಸಲು ಸರ್ಕಾರ ಮುಂದಾಗಿದೆ.
ವಿಧಾನಸಭೆಯಲ್ಲಿ ಬಜೆಟ್ ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಘೋಷಣೆ ಮಾಡಿದರು. ಮಕ್ಕಳ ಗಮನ ಓದಿನತ್ತ ಕೇಂದ್ರೀಕರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು. ಇತ್ತೀಚಿನ ವರ್ಷಗಳಲ್ಲಿ ಮಕ್ಕಳಲ್ಲಿ ಸೋಶಿಯಲ್ ಮೀಡಿಯಾ ಅತಿಯಾದ ಬಳಕೆ ಹೆಚ್ಚುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಈ ನಿರ್ಧಾರಕ್ಕೆ ಮುನ್ನ ಹಲವು ಹಂತಗಳಲ್ಲಿ ಚರ್ಚೆಗಳು ನಡೆದಿದ್ದವು. ರಾಜ್ಯದ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಮಕ್ಕಳ ಮೇಲೆ ಸೋಶಿಯಲ್ ಮೀಡಿಯಾ ಪರಿಣಾಮ ಕುರಿತು ಆತಂಕ ವ್ಯಕ್ತಪಡಿಸಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿ ಸೋಶಿಯಲ್ ಮೀಡಿಯಾ ಬಳಕೆ ನಿಯಂತ್ರಣದ ಬಗ್ಗೆ ಹಲವು ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಜೊತೆಗೂ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದರು.
ಇನ್ನೊಂದೆಡೆ, ವಿರೋಧ ಪಕ್ಷದ ಕೆಲ ನಾಯಕರು ಸಹ ಮಕ್ಕಳನ್ನು ಸೋಶಿಯಲ್ ಮೀಡಿಯಾದಿಂದ ದೂರ ಇಡುವ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದ್ದರು. ಬಿಜೆಪಿ ಶಾಸಕ ಸುರೇಶ್ ಕುಮಾರ್ ಕೂಡ ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.
ಈ ನಿರ್ಧಾರ ಜಾರಿಗೆ ಬಂದರೆ, ಮಕ್ಕಳ ಸೋಶಿಯಲ್ ಮೀಡಿಯಾ ಬಳಕೆಗೆ ನಿಷೇಧ ಹೇರಿದ ದೇಶದ ಮೊದಲ ರಾಜ್ಯವಾಗಿ ಕರ್ನಾಟಕ ಗುರುತಿಸಿಕೊಳ್ಳುವ ಸಾಧ್ಯತೆ ಇದೆ. ಆಸ್ಟ್ರೇಲಿಯಾ ಈಗಾಗಲೇ ಇಂತಹ ಕ್ರಮ ಕೈಗೊಂಡಿದ್ದು, ಯುರೋಪಿನ ಕೆಲವು ದೇಶಗಳಲ್ಲೂ ಶಾಲೆಗಳಲ್ಲಿ ಮೊಬೈಲ್ ಮತ್ತು ಸೋಶಿಯಲ್ ಮೀಡಿಯಾ ಬಳಕೆಗೆ ನಿಯಂತ್ರಣ ಜಾರಿಯಲ್ಲಿದೆ.
ಮಕ್ಕಳಲ್ಲಿ ಮಾನಸಿಕ ಒತ್ತಡ, ಆತಂಕ, ನಿದ್ರಾಹೀನತೆ ಮುಂತಾದ ಸಮಸ್ಯೆಗಳು ಹೆಚ್ಚುತ್ತಿರುವುದರಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ ಕೆಲವು ವಲಯಗಳು ಈ ನಿಷೇಧದಿಂದ ಸಂಪೂರ್ಣ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿವೆ.



