Karnataka Weather: ಬೆಂಗಳೂರು ಸೇರಿ ರಾಜ್ಯದಲ್ಲಿ ಗಾಳಿ, ಗುಡುಗು ಸಹಿತ ಮಳೆ ಮುನ್ಸೂಚನೆ!
Karnataka Weather: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ತುಸು ಕುಂಠಿತವಾಗಿದ್ದು, ಸೆಪ್ಟೆಂಬರ್ 5 ಮತ್ತು 6ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಹಲವೆಡೆ ಗಾಳಿ, ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನ ಮಳೆಯ ವಾತಾವರಣ (Karnataka Weather) ಮುಂದುವರಿಯುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ರಾಜ್ಯದಲ್ಲಿ ನೈಋತ್ಯ ಮುಂಗಾರು (Southwest Monsoon) ತುಸು ದುರ್ಬಲಗೊಂಡಿದ್ದರೂ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ (Rain Update) ನಿರೀಕ್ಷೆಯಿದೆ.
ಸೆಪ್ಟೆಂಬರ್ 5 ಮತ್ತು 6ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಒಳನಾಡಿಗೆ ಹೋಲಿಸಿದರೆ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದು ಕೆಲವೆಡೆ ಸಾಧಾರಣ ಮಳೆಯಾಗಬಹುದು. ಇದೇ ವೇಳೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಅಲ್ಲಲ್ಲಿ ಹಗುರ ಮಳೆಯೊಂದಿಗೆ (Light Rain) ಬಲವಾದ ಗಾಳಿ ಬೀಸುವ ಮುನ್ಸೂಚನೆ ಇದೆ. ಸೆಪ್ಟೆಂಬರ್ 6ರಂದು ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನಲ್ಲೂ ಮಳೆಯ ಮುನ್ಸೂಚನೆ ವ್ಯಾಪಕವಾಗಿದೆ. ಸೆಪ್ಟೆಂಬರ್ 5ರಂದು ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಮಳೆಯಾಗಬಹುದು.
ಸೆಪ್ಟೆಂಬರ್ 6ರಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ (Thunderstorm) ಸಾಧ್ಯತೆಯಿದೆ. ಶಿವಮೊಗ್ಗ, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು ಮತ್ತು ರಾಮನಗರದಲ್ಲೂ ಮಳೆಯ ನಿರೀಕ್ಷೆಯಿದೆ.
ಈ ನಡುವೆ ಶುಕ್ರವಾರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರಿನ ಜಿಕೆವಿಕೆ ಕೇಂದ್ರದಲ್ಲಿ 3 ಸೆಂ.ಮೀ., ಬೆಂಗಳೂರು ಗ್ರಾಮಾಂತರದ ಹೊಸಕೋಟೆಯಲ್ಲಿ 3 ಸೆಂ.ಮೀ. ಹಾಗೂ ಬೆಂಗಳೂರಿನ ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್‌ನಲ್ಲಿ 2 ಸೆಂ.ಮೀ. ಮಳೆ ದಾಖಲಾಗಿದೆ.
ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರ ಮಳೆಯ ಚಟುವಟಿಕೆ ಸಾಮಾನ್ಯಕ್ಕಿಂತ ಕಡಿಮೆ ಇರುವ ಸಾಧ್ಯತೆಯಿದೆ. ಆದರೂ ಸೆಪ್ಟೆಂಬರ್ 5 ಮತ್ತು 6ರಂದು ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ.



