ಕರ್ನಾಟಕ ಮಳೆ: ಆ.13ರವರೆಗೆ ಹಲವು ಜಿಲ್ಲೆಗಳಲ್ಲಿ ವರ್ಷಧಾರೆ! ಭಾರೀ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಆಗಸ್ಟ್ 13ರವರೆಗೆ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಉಡುಪಿ, ಕೊಡಗು, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಇರಲಿದೆ.

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಆಗಸ್ಟ್ 13ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರ್ಷಧಾರೆ ಮುಂದುವರಿಯಲಿದೆ.

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಆಗಸ್ಟ್ 8ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದರೂ, ಆಗಸ್ಟ್ 9ರಿಂದ 13ರ ನಡುವೆ ಮಳೆಯ ವಿಂಗಡಣೆ ಹಾಗೂ ತೀವ್ರತೆ ತಾತ್ಕಾಲಿಕವಾಗಿ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಇನ್ನು ಬೆಂಗಳೂರಿಗೆ ಯಾವುದೇ ಅಲರ್ಟ್ ನೀಡಲಾಗಿಲ್ಲ. ಆದರೂ ನಗರದಲ್ಲಿ ಸುಮಾರು ನಾಲ್ಕು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರು ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಂಚರಿಸುವುದು ಉತ್ತಮ.

ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ನೀಡಲಾಗಿದೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories