Karnataka Weather: ಕರ್ನಾಟಕದಲ್ಲಿ ಮುಂದಿನ 2 ದಿನ ವ್ಯಾಪಕ ಮಳೆ; ಈ ಜಿಲ್ಲೆಗಳ ಜನರೇ ಗಮನಿಸಿ
Karnataka Weather : ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಸೆಪ್ಟೆಂಬರ್ 11 ಮತ್ತು 12ರಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.

Karnataka Weather : ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಚಟುವಟಿಕೆ ಇಳಿಮುಖವಾಗಿದ್ದು, ನೈಋತ್ಯ ಮುಂಗಾರು (Southwest Monsoon) ದುರ್ಬಲವಾಗಿದೆ. ಹೀಗಾಗಿ ರಾಜ್ಯದ ಎಲ್ಲೆಡೆ ವ್ಯಾಪಕ ಮಳೆಯ ಬದಲು, ಕೆಲ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಾತ್ರ ಹಗುರ ಮಳೆಯಾಗುವ (Rain Alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Department) ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 11ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗಬಹುದು. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಗದಗ, ಕೊಪ್ಪಳ, ಧಾರವಾಡ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಅಲ್ಲಲ್ಲಿ ಹಗುರ ಮಳೆಯ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನಲ್ಲೂ ಕೆಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಸೆಪ್ಟೆಂಬರ್ 12ರಂದು ಮಳೆಯ ವ್ಯಾಪ್ತಿ ಕೊಂಚ ಬದಲಾಗುವ ಸಾಧ್ಯತೆಯಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆ ಬೀಳಬಹುದು. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ.
ಇದೇ ವೇಳೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆ (Thunderstorm) ಸಂಭವಿಸುವ ಸಾಧ್ಯತೆಯಿದೆ. ಹೀಗಾಗಿ ಈ ಭಾಗದ ಜನರು ಹವಾಮಾನ ಬದಲಾವಣೆಯ ಬಗ್ಗೆ ಗಮನಹರಿಸುವುದು ಒಳಿತು.
ಇನ್ನು, ಗುರುವಾರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕೆಲವೇ ಪ್ರದೇಶಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಗರಿಷ್ಠ 3 ಸೆಂ.ಮೀ ಮಳೆ ದಾಖಲಾಗಿದ್ದು, ಉತ್ತರ ಕನ್ನಡದ ನೀಲ್ಕುಂದ, ಧಾರವಾಡದ ಹುಬ್ಬಳ್ಳಿ ಹಾಗೂ ಕೊಡಗಿನ ಸಂತೆಹಳ್ಳಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ದಕ್ಷಿಣ ಕನ್ನಡದ ಬೆಳ್ತಂಗಡಿ, ಉಡುಪಿಯ ಸಿದ್ದಾಪುರ, ಶಿವಮೊಗ್ಗದ ಅಗ್ರಹಾರ ಕೊಣಂದೂರು ಮತ್ತು ಹುಂಚದಕಟ್ಟೆಯಲ್ಲಿ ತಲಾ 1 ಸೆಂ.ಮೀ ಮಳೆ ದಾಖಲಾಗಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಮಳೆ ಚಟುವಟಿಕೆ ದುರ್ಬಲವಾಗಿದ್ದರೂ, ಮುಂದಿನ ಎರಡು ದಿನಗಳಲ್ಲಿ ಕರಾವಳಿ ಮತ್ತು ಒಳನಾಡಿನ ಆಯ್ದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ.



