ಕರ್ನಾಟಕದಲ್ಲಿ ಮುಂದಿನ 2 ದಿನ ಭಾರೀ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಮುಂಗಾರು (Monsoon) ಚಟುವಟಿಕೆ ಮತ್ತೆ ಚುರುಕಾಗಿದ್ದು, ಆಗಸ್ಟ್ 25ರಂದು ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಬಹುದು.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಈ ಭಾಗಗಳಲ್ಲಿ ಜನರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಶಿವಮೊಗ್ಗದಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಕೆಲವೆಡೆ ಭಾರಿ ಮಳೆಯ ನಿರೀಕ್ಷೆ ಇದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವೂ (KSNDMC) ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ನೀಡಿದೆ.
ಬೆಂಗಳೂರಿನಲ್ಲೂ ಮಳೆಯ ಸಾಧ್ಯತೆ
ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು ನಗರ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯನ್ನೂ ಸೂಚಿಸಲಾಗಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗಬಹುದು.
ಉತ್ತರ ಒಳನಾಡಿನ ವಿಜಯಪುರ, ಬೆಳಗಾವಿ, ಕಲಬುರಗಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬಾಗಲಕೋಟೆ, ಬೀದರ್, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಕೆಲವು ಪ್ರದೇಶಗಳಲ್ಲಿ ಮಳೆ ಕಾಣಿಸಿಕೊಳ್ಳಬಹುದು.
ಆಗಸ್ಟ್ 26ರಂದು ಮಳೆ ಎಲ್ಲೆಲ್ಲಿ?
ಆಗಸ್ಟ್ 26ರಂದು ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗಬಹುದು. ಮತ್ತೊಂದೆಡೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಬಹುದು. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಇತ್ತೀಚೆಗೆ ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ?
ಆಗಸ್ಟ್ 24ರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಉತ್ತರ ಒಳನಾಡಿನಲ್ಲಿ ಮುಂಗಾರು ಚಟುವಟಿಕೆ ಸಕ್ರಿಯವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಮಳೆಯ ಪರಿಸ್ಥಿತಿ ಕಂಡುಬಂದಿದೆ.
ಈ ಅವಧಿಯಲ್ಲಿ ಉತ್ತರ ಕನ್ನಡದ ನೀಲಕುಂದದಲ್ಲಿ 9 ಸೆಂ.ಮೀ, ಬೀದರ್‌ನ ಹುಮನಾಬಾದ್‌ನಲ್ಲಿ 8 ಸೆಂ.ಮೀ ಮತ್ತು ಕೊಡಗಿನ ಶ್ರೀಮಂಗಲದಲ್ಲಿ 8 ಸೆಂ.ಮೀ ಮಳೆ ದಾಖಲಾಗಿದೆ.
ಶಿವಮೊಗ್ಗದ ಆಗುಂಬೆ, ದಕ್ಷಿಣ ಕನ್ನಡದ ಧರ್ಮಸ್ಥಳ ಹಾಗೂ ಕೊಡಗಿನ ಸಂತಹಳ್ಳಿಯಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ. ಮುಂದಿನ ಎರಡು ದಿನಗಳಲ್ಲೂ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಭಾರಿ ಮಳೆಯ ಮುನ್ಸೂಚನೆ ಇರುವ ಪ್ರದೇಶಗಳಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಮಳೆ ಹಾಗೂ ಗಾಳಿಯ ಸಂದರ್ಭದಲ್ಲಿ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.



