ಕರ್ನಾಟಕ ಹವಾಮಾನ: ಇಂದು ಹಾಗೂ ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather: ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿಗೂ ಮಳೆ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದಲ್ಲಿ (Karnataka Weather) ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 22 ಮತ್ತು 23ರಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಸೆಪ್ಟೆಂಬರ್ 23ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡದಲ್ಲೂ ಭಾರಿ ಮಳೆಯ ಮುನ್ಸೂಚನೆ ಇದ್ದು, ಕರಾವಳಿ ಭಾಗದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರಿ-ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ಇದೆ. ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಬಹುದು.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸೆ.23ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ಹಾಸನ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಬೆಂಗಳೂರಿನಲ್ಲಿ (Bengaluru Rain) ಕಳೆದ ಎರಡು ದಿನಗಳಿಂದ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಕೂಡ ಸೆಪ್ಟೆಂಬರ್ 23 ಮತ್ತು 24ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆಯನ್ನು ಸೂಚಿಸಿದ್ದು, ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ.

ಇನ್ನು, ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು (Southwest Monsoon) ಸಕ್ರಿಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಕರಾವಳಿಯಲ್ಲಿ ದುರ್ಬಲವಾಗಿತ್ತು. ಸೋಮವಾರ ಸಂಜೆ ಮುಕ್ತಾಯಗೊಂಡ 24 ಗಂಟೆ ಅವಧಿಯಲ್ಲಿ ಗದಗ ಜಿಲ್ಲೆಯ ನರಗುಂದದಲ್ಲಿ 9 ಸೆಂ.ಮೀ ಮಳೆಯಾಗಿದೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ 5 ಸೆಂ.ಮೀ, ವಿಜಯನಗರ ಜಿಲ್ಲೆಯ ಹೊಸಹಳ್ಳಿಯಲ್ಲಿ 4 ಸೆಂ.ಮೀ ಹಾಗೂ ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ 4 ಸೆಂ.ಮೀ ಮಳೆ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿವೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories