ಕರ್ನಾಟಕ ಹವಾಮಾನ: ಇಂದು, ನಾಳೆ ರಾಜ್ಯದ ಹಲವೆಡೆ ಮಳೆ; ಬೆಂಗಳೂರು, ಮೈಸೂರು, ಮಂಡ್ಯ ಭಾಗಕ್ಕೂ ಮುನ್ಸೂಚನೆ
Karnataka Weather: ನವೆಂಬರ್ 25 ಮತ್ತು 26ರಂದು ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲೂ ಗುಡುಗು ಮಿಂಚಿನೊಂದಿಗೆ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

- ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
- ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ
- ಉತ್ತರ ಒಳನಾಡಿನಲ್ಲಿ ಒಣ ಹವಾಮಾನ
ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹವಾಮಾನ (Karnataka Weather) ಬದಲಾಗುವ ಸಾಧ್ಯತೆಯಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ಮಳೆಯ ವಾತಾವರಣ (Rain Update) ಕಂಡುಬರಲಿದ್ದು, ಕೆಲವು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ನವೆಂಬರ್ 25ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ದಿನ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಬಹುದು.
ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯ ಹವಾಮಾನ ಬದಲಾವಣೆಗಳ ಬಗ್ಗೆ ಗಮನಹರಿಸುವುದು ಉತ್ತಮ.
ಇನ್ನೊಂದೆಡೆ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಲಕ್ಷಣಗಳು ಕಂಡುಬರುತ್ತಿಲ್ಲ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರದಲ್ಲೂ ಹೆಚ್ಚಿನ ಮಳೆಯ ಸಾಧ್ಯತೆ ಇಲ್ಲ.
ನವೆಂಬರ್ 26ರಂದು ಹೇಗಿರಲಿದೆ ಹವಾಮಾನ?
ಗುರುವಾರವೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಕೋಲಾರ, ತುಮಕೂರು, ರಾಮನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಬಹುದು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಒಣ ಹವಾಮಾನ ಇರಲಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಕಡಿಮೆ ಎಂದು ಮುನ್ಸೂಚನೆ ತಿಳಿಸಿದೆ.
ರಾಜ್ಯದಲ್ಲಿ ಸದ್ಯ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಏರಿಳಿತ ಇರುವುದಿಲ್ಲ. ಆದರೂ ಮುಂದಿನ ದಿನಗಳಲ್ಲಿ ಕನಿಷ್ಠ ತಾಪಮಾನ ನಿಧಾನವಾಗಿ ಹೆಚ್ಚಾಗುವ ಪ್ರವೃತ್ತಿ ಕಂಡುಬರಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.





