ಕೋಲಾರ : ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು – ಎಸ್.ಮುನಿಸ್ವಾಮಿ

Government projects should reach eligible beneficiaries Says S. Muniswamy

🌐 Kannada News :

ಕನ್ನಡ ನ್ಯೂಸ್ ಟುಡೇKolar News

ಕೋಲಾರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿ, ಯೋಜನೆಗಳ ಸದುಪಯೋಗ ಆಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಎಸ್. ಮುನಿಸ್ವಾಮಿ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ಸಂವಹನದಿಂದ ಕಾರ್ಯನಿರ್ವಹಿಸಿದರೆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ. ಸರ್ಕಾರದ ಯೋಜನೆಗಳ ಉಪಯೋಗ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪುವಂತಾಗಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳ ಸದ್ಭಳಕೆ ಸಾಧ್ಯವಾಗುತ್ತದೆ ಎಂದರು.

ಸರ್ಕಾರವು 3150 ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿಸುತ್ತಿದ್ದು, ಈ ಬಗ್ಗೆ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಮಾಹಿತಿ ನೀಡಬೇಕು. ಮುದ್ರ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಯಾವುದೇ ಶೂರಿಟಿ ಅವಶ್ಯಕತೆಯಿಲ್ಲ. ಆದರೆ ಬ್ಯಾಂಕಿನವರು ಸಾಲ ನೀಡಲು ವಿಳಂಬ ನೀತಿ ಅನುಸರಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ಪರಿಶೀಲಿಸುವಂತೆ ಲೀಡ್ ಬ್ಯಾಂಕ್ ಮ್ಯಾನೇಜರ್‍ಗೆ ಸೂಚಿಸಿದರು.

ಬೇಸಿಗೆ ಕಾಲ ಸಮೀಪಿಸುತ್ತಿದ್ದು, ನೀರಿನ ಸಮಸ್ಯೆ ಕಂಡುಬರುವ ಹಳ್ಳಿಗಳ ಪಟ್ಟಿಯನ್ನು ತಯಾರಿಸಿ ಅಗತ್ಯ ಮುನ್ನೆಚ್ಚರಿಕಗೆ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿರುವೆಡೆ ಹೊಸ ಕೊಳವೆಬಾವಿಗಳನ್ನು ಕೊರೆಸಿ ಟ್ಯಾಂಕರ್ ಹಾವಳಿಯನ್ನು ತಪ್ಪಿಸಲಾಗುವುದು. ಬತ್ತಿ ಹೋದ ಕೊಳವೆಬಾವಿಗಳ ಹಳೇ ಪಂಪು ಮೋಟಾರ್‍ಗಳನ್ನು ಮರು ಬಳಕೆ ಮಾಡಬೇಕು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜಿಲ್ಲೆಗೆ 1785 ಮನೆಗಳು ಮಂಜೂರಾಗಿದ್ದು, ನಿಜವಾಗಿಯೂ ಗುಡಿಸಲುಗಳಲ್ಲಿ ವಾಸವಾಗಿರುವ ಅರ್ಹ ಫಲಾನುಭವಿಗಳಿಗೆ ಅಧಿಕಾರಿಗಳು ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ತಿಳಿಸಿದರು.

ಪ್ಲಾಸ್ಟಿಕ್ ನಿಷೇಧ ಸ್ವಚ್ಛತೆ ಬಗ್ಗೆ ಅರಿವು ಮುಂತಾದ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿ ಮಟ್ಟದಿಂದ ಕೈಗೊಳ್ಳಬೇಕು. ಕೋಲಾರದಲ್ಲಿ ಸುಂದರವಾದ ಪ್ರವಾಸಿ ತಾಣಗಳಿದ್ದು, ಇವುಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸಬೇಕು. ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಠಿಕ ಆಹಾರ ನೀಡುವ ಮೂಲಕ ಆರೋಗ್ಯವಂತ ಮಕ್ಕಳ ಬೆಳವಣಿಗೆಗೆ ಪೂರಕ ವಾತಾವರಣ ರೂಪಿಸಬೇಕು. ಅನುದಾನಗಳ ಬಳಕೆಯನ್ನು ಪಾರದರ್ಶಕತೆ ಕಾಪಾಡಿಕೊಳ್ಳಬೇಕು. ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಠಾಚಾರ ಪಾಲನೆ ಮಾಡಿ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೋಲಾರ ವಿಧಾಸಭಾ ಕ್ಷೇತ್ರದ ಶಾಸಕರಾದ ಕೆ. ಶ್ರೀನಿವಾಸಗೌಡ ಅವರು ಮಾತನಾಡಿ, ಜಿಲ್ಲೆಯು ಬರಪೀಡಿತ ಜಿಲ್ಲೆಯಾಗಿದ್ದು, ಕುಡಿಯುವ ನೀರಿನ ಪೂರೈಕೆಗೆ ಪ್ರಥಮ ಆದ್ಯತೆ ನೀಡಬೇಕು. ಫೆಬ್ರವರಿಯಿಂದ ಜೂನ್ ವರೆಗೂ ಜಿಲ್ಲೆಯಲ್ಲಿ ನೀರಿನ ಸಮಸ್ಯೆಯುಂಟಾಗಲಿದ್ದು, ಅಧಿಕಾರಿಗಳು ಈಗಲೇ ಎಚ್ಚೆತ್ತುಕೊಳ್ಳಬೇಕು. ಸಿ.ಎಸ್.ಆರ್ ಅನುದಾನದಡಿ ಕಂಪನಿಗಳು ಕುಡಿಯುವ ನೀರಿನ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ತಿಳಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿ.ಎಸ್ ವೆಂಕಟೇಶ್ ಅವರು ಮಾತನಾಡಿ, ಶ್ರೀನಿವಾಸಪುರ ತಾಲ್ಲೂಕಿನ ಮುದಿಮಡುಗು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗ ಒತ್ತುವರಿ ಆಗಿರುವ ಕುರಿತು ದೂರು ಬಂದಿದ್ದು, ಈ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ಅವರು ಮಾತನಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮಾಡಲು ದಿಶಾ ಕಮಿಟಿಯನ್ನು ರಚಿಸಲಾಗಿದೆ. ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲು 3 ತಿಂಗಳಿಗೊಮ್ಮೆ ಸಭೆ ನಡೆಯುತ್ತದೆ ಎಂದ ಅವರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಇತಿಹಾಸದಲ್ಲಿಯೇ ಈ ವರ್ಷ ಕಡಿಮೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡುತ್ತಿದ್ದು, 08 ಗ್ರಾಮಗಳಲ್ಲಿ ಟ್ಯಾಂಕರ್‍ಗಳ ಮೂಲಕ ಹಾಗೂ 67 ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದರು.

ಸ್ವಚ್ಚ ಸರ್ವೆಕ್ಷಣ್ ಅಡಿಯಲ್ಲಿ ಸ್ವಚ್ಚತಾ ಆಪ್ ಮೂಲಕ ಸಾರ್ವಜನಿಕರು ಸ್ವಚ್ಚತೆ ಸಂಬಂಧ ದೂರುಗಳನ್ನು ನೀಡಬಹುದಾಗಿದೆ. ದೂರುಗಳನ್ನು ನೀಡಿದ 72 ಗಂಟೆಯೊಳಗೆ ಪರಹಾರ ನೀಡಲಾಗುವುದು. ಸ್ವಚ್ಚತೆ ಕಾಪಾಡುವಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಸ್ವಚ್ಚತೆಗೆ ಸಂಬಂದಿಸಿದ ಪೊಸ್ಟರ್‍ಗಳನ್ನು ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಯಶೋಧ ಕೃಷ್ಣಮೂರ್ತಿ ಸೇರಿದಂತೆ ದಿಶಾ ಸಮಿತಿಯ ಸದಸ್ಯರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.////

Quick Links : Kolar News Kannada


Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.