ಕೊಟ್ಟಿಗೆಹಾರ ಬಳಿ ಭೀಕರ ರಸ್ತೆ ಅಪಘಾತ! ಮೂವರು ಸ್ಥಳದಲ್ಲೇ ದುರ್ಮರಣ
ಕೊಟ್ಟಿಗೆಹಾರ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡು ಹಾಸನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ (Kottigehara) ಬಳಿ ಶನಿವಾರ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಟ್ಟಿಗೆಹಾರದಲ್ಲಿರುವ ಪೆಟ್ರೋಲ್ ಬಂಕ್‌ವೊಂದರ ಮುಂಭಾಗ ರಸ್ತೆ ಬದಿಯಲ್ಲಿ ಸಿಲಿಂಡರ್‌ಗಳನ್ನು ತುಂಬಿಕೊಂಡು ಲಾರಿ ನಿಂತಿತ್ತು. ಈ ವೇಳೆ ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪ್ರೇಮ್ ಕುಮಾರ್ ಮತ್ತು ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ.
ಮೃತರು ತುಮಕೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಮಾರ್ಗಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಘಟನೆ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.



