ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ! ನಾಲ್ವರಿಗೆ ಗಾಯ
ಉಪ್ಪಿನಂಗಡಿ ಸಮೀಪ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- ಬಸ್-ಕಾರು ಡಿಕ್ಕಿ: ಉಪ್ಪಿನಂಗಡಿ ಸಮೀಪ ಅಪಘಾತ
- ನಾಲ್ವರಿಗೆ ಗಾಯ: 3 ಬಸ್ ಪ್ರಯಾಣಿಕರು, ಕಾರು ಚಾಲಕ
- ಉಪ್ಪಿನಂಗಡಿ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಶನಿವಾರ ಕೆಎಸ್‌ಆರ್‌ಟಿಸಿ ಬಸ್ (KSRTC Bus) ಮತ್ತು ಕಾರು ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಕೌಕ್ರಾಡಿ ಗ್ರಾಮದ ಮೂಡುಬೈಲು ಪರಕ್ಕೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಹಾನಿಯಾಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಕೆಎಸ್‌ಆರ್‌ಟಿಸಿ ಬಸ್ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ತೆರಳುತ್ತಿತ್ತು. ಇದೇ ವೇಳೆ ಕಾರು ಧರ್ಮಸ್ಥಳದಿಂದ ಬೆಂಗಳೂರಿನ ಕಡೆಗೆ ಸಂಚರಿಸುತ್ತಿತ್ತು. ಈ ವೇಳೆ ಎರಡೂ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ.
ಅಪಘಾತದಲ್ಲಿ ಬಸ್‌ನಲ್ಲಿದ್ದ ಹರಿಶ್ಚಂದ್ರ, ಅಭಯ ಹಾಗೂ ಮಲ್ಲಿಕಾ ಗಾಯಗೊಂಡಿದ್ದಾರೆ. ಗಾಯಗೊಂಡ ಮೂವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ (Private Hospital) ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಇನ್ನು ಕಾರು ಚಾಲಕ ಗೌತಮ್ ಸಿಂಗ್ ಗಾಯಗೊಂಡಿದ್ದು, ಅವರನ್ನು ಹಾಸನದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಅಪಘಾತದ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ (Uppinangady Police) ಪ್ರಕರಣ ದಾಖಲಾಗಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.



