ಕರ್ನಾಟಕದಲ್ಲಿ ಮುಂಗಾರು ಮತ್ತೆ ಬಿರುಸು; ಕರಾವಳಿಗೆ ಆರೆಂಜ್ ಅಲರ್ಟ್, ಮಲೆನಾಡಲ್ಲೂ ಭಾರೀ ಮಳೆ
Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಜೊತೆಗೆ ಬಲವಾದ ಗಾಳಿಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು, ಜುಲೈ 29: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು (Karnataka Weather Forecast), ಮುಂದಿನ ಎರಡು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.
ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಜುಲೈ 29 ಹಾಗೂ 30ರಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಅದರಲ್ಲೂ ಶಿವಮೊಗ್ಗದಲ್ಲಿ ಜುಲೈ 30ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯ ನಿರೀಕ್ಷೆಯಿದ್ದು, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆಯೂ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು, ರಾಮನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ವಿಜಯನಗರ, ಬಳ್ಳಾರಿ ಹಾಗೂ ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ನಗರ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸಲಹೆ ನೀಡಲಾಗಿದೆ.
ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪದಲ್ಲಿ 10 ಸೆಂ.ಮೀ. ಮಳೆಯಾದರೆ, ಕುಮಟಾ, ಮಂಕಿ ಹಾಗೂ ಹೊನ್ನಾವರದಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಅಗುಂಬೆಯಲ್ಲೂ 7 ಸೆಂ.ಮೀ. ಮಳೆಯಾಗಿದ್ದು, ಕರಾವಳಿ ಭಾಗದಲ್ಲಿ ಮುಂಗಾರು ತನ್ನ ಅಬ್ಬರವನ್ನು ಮುಂದುವರಿಸಿದೆ.
ಹವಾಮಾನ ಇಲಾಖೆ ಸೂಚಿಸಿರುವಂತೆ ಕರಾವಳಿ ಮತ್ತು ಮಲೆನಾಡು ಪ್ರದೇಶದ ನಿವಾಸಿಗಳು ಅನಗತ್ಯ ಪ್ರಯಾಣ ತಪ್ಪಿಸುವುದು, ನದಿ-ಹಳ್ಳಗಳ ಸಮೀಪ ಎಚ್ಚರಿಕೆಯಿಂದ ಇರುವುದು ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವುದು ಸುರಕ್ಷಿತ ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.



