ಶಿವಾಜಿ ಜಯಂತಿ ಕಲ್ಲುತೂರಾಟ: ಫೆ.26ರಂದು ಬಾಗಲಕೋಟೆಯಲ್ಲಿ ಭಾರಿ ಪ್ರತಿಭಟನೆ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಫೆಬ್ರವರಿ 26ರಂದು ಅಂಬಾಬಾಯಿ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ಹಿಂದೂ ಸಂಘಟನೆಗಳು ಕರೆ ನೀಡಿವೆ.

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಘಟನೆ ಇದೀಗ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಘಟನೆ ನಡೆದ ದಿನದಿಂದಲೂ ಆರೋಪಿಗಳನ್ನು ಬಂಧಿಸಿಲ್ಲ ಎಂಬ ಆರೋಪ ಕೇಳಿಬರುತ್ತಿದ್ದು, ಇದರ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಭಾನುವಾರ ನಡೆದ ಸಭೆಯಲ್ಲಿ ಹಿಂದೂ ಸಕಲ ಸಮಾಜದ ಮುಖಂಡರು ಹಾಗೂ ಹಲವು ರಾಜಕೀಯ ನಾಯಕರು ಭಾಗವಹಿಸಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು. ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಮೇಲೆ ಕಲ್ಲು ಹಾಗೂ ಚಪ್ಪಲಿ ಎಸೆದವರನ್ನು ಇನ್ನೂ ಬಂಧಿಸದಿರುವುದು ಸಮುದಾಯದ ಮನಸ್ಸಿಗೆ ನೋವುಂಟುಮಾಡಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಫೆಬ್ರವರಿ 26ರಂದು ಮೆರವಣಿಗೆ
ಈ ಹಿನ್ನೆಲೆಯಲ್ಲಿ ಫೆಬ್ರವರಿ 26ರಂದು ಬೆಳಗ್ಗೆ 10.30ಕ್ಕೆ ಅಂಬಾಬಾಯಿ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ. ಆರೋಪಿಗಳನ್ನು ತಕ್ಷಣ ಬಂಧಿಸಬೇಕು, ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ಘಟನೆ ವೇಳೆ ಕೆಲವು ದುಷ್ಕೃತ್ಯಗಳಲ್ಲಿ ಭಾಗಿಯಾದವರು ಮಸೀದಿಯೊಳಗೆ ಸೇರಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಬಂಧನವಾಗದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಮುಖಂಡರು ನೀಡಿದ್ದಾರೆ.
ಪ್ರಕರಣದ ಮುಂದಿನ ಬೆಳವಣಿಗೆಗಳು ಜಿಲ್ಲೆಯಲ್ಲೇ ತೀವ್ರ ಕುತೂಹಲ ಮೂಡಿಸಿವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹೆಚ್ಚುವರಿ ಭದ್ರತೆ ಕೈಗೊಂಡಿದೆ.







