Karnataka Weather: ಬೆಂಗಳೂರು ಸೇರಿ ಕರ್ನಾಟಕ ರಾಜ್ಯಕ್ಕೆ ಮತ್ತೆ ಮಳೆ ಅಲರ್ಟ್! ಜೂನ್ 6ರವರೆಗೆ ಬಿರುಗಾಳಿ, ಗುಡುಗು ಸಹಿತ ಮಳೆ
Karnataka Weather: ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂನ್ 6ರವರೆಗೆ ಬಿರುಗಾಳಿ, ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ.
Karnataka Weather: ಕೆಲವು ದಿನಗಳಿಂದ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಕರ್ನಾಟಕದ ಜನರಿಗೆ ಹವಾಮಾನ ಇಲಾಖೆ ತಂಪಾದ ಸುದ್ದಿ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಮಳೆಯ (Rain) ಚಟುವಟಿಕೆ ಹೆಚ್ಚಾಗಲಿದ್ದು, ಜೂನ್ 6ರವರೆಗೆ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ವ್ಯಕ್ತವಾಗಿದೆ.
ನೈಋತ್ಯ ಮುಂಗಾರು ಜೂನ್ 4ರ ಸುಮಾರಿಗೆ ಕೇರಳ ಮತ್ತು ತಮಿಳುನಾಡಿನ ಭಾಗಗಳಿಗೆ ಪ್ರವೇಶಿಸುವ ನಿರೀಕ್ಷೆಯಿದೆ. ಮುಂಗಾರು ಕೇರಳ ಪ್ರವೇಶಿಸಿದ ಎರಡು ಅಥವಾ ಮೂರು ದಿನಗಳ ಬಳಿಕ ಕರ್ನಾಟಕಕ್ಕೂ ಕಾಲಿಡುವ ಸಾಧ್ಯತೆ ಇದ್ದು, ಆರಂಭಿಕ ಹಂತದಲ್ಲಿ ಮಳೆಯ ಪ್ರಮಾಣ ಸಾಧಾರಣ ಮಟ್ಟದಲ್ಲಿರಬಹುದು ಎಂದು ಅಂದಾಜಿಸಲಾಗಿದೆ.
ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆ ಇದೆ. ಅಲ್ಲದೆ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿಯೂ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಹಾಸನ, ತುಮಕೂರು, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಜೊತೆಗೆ ಬಿರುಗಾಳಿ, ಗುಡುಗು ಮತ್ತು ಸಿಡಿಲಿನ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ವಿಜಯನಗರ, ಬಳ್ಳಾರಿ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ತುಂತುರುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ವೇಳೆಗೆ ಕೆಲ ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ತಾಪಮಾನ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ನಡುವೆ ದಾಖಲಾಗುವ ನಿರೀಕ್ಷೆಯಿದೆ.
ಹವಾಮಾನ ತಜ್ಞರ ಪ್ರಕಾರ ಜೂನ್ 7ರ ನಂತರ ಮಳೆಯ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಮುಂದಿನ ಕೆಲ ದಿನಗಳು ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆ ಇದೆ.




