Karnataka Weather: ಈ ಕರ್ನಾಟಕ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ! ಭೂಕುಸಿತ ಎಚ್ಚರಿಕೆ.. ಹೈ ಅಲರ್ಟ್
Karnataka Weather: ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನ ಮಳೆಯ ಅಬ್ಬರ ಮುಂದುವರಿಯಲಿದೆ. ಘಟ್ಟ ಪ್ರದೇಶಗಳಲ್ಲಿ ಭೂಕುಸಿತದ ಎಚ್ಚರಿಕೆ ನೀಡಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Karnataka Weather: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಸಿನ ಗಾಳಿ ಹಾಗೂ ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವು ಭಾಗಗಳಲ್ಲಿಯೂ ಗುಡುಗು-ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದರ ಜೊತೆಗೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಘಟ್ಟ ಪ್ರದೇಶಗಳಲ್ಲಿ ಜುಲೈ 9ರಿಂದ 12ರವರೆಗೆ ಒಂದು ಅಥವಾ ಎರಡು ಕಡೆ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸ್ಥಳೀಯರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಸೂಚಿಸಿದೆ.
ಮಳೆಯ ಪ್ರಮಾಣದ ವಿಚಾರದಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಗದಹಳ್ಳಿ ಅತಿ ಹೆಚ್ಚು ಮಳೆ ದಾಖಲಿಸಿದೆ. ಇಲ್ಲಿ 196.5 ಮಿ.ಮೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ ವರ್ಷಧಾರೆಯಾಗಿದೆ. ಕೊಡಗಿನ ವಿರಾಜಪೇಟೆ ತಾಲೂಕಿನ ಬಿರುನಾನಿಯಲ್ಲಿ 190.5 ಮಿ.ಮೀ, ಚಿಕ್ಕಮಗಳೂರಿನ ಶೃಂಗೇರಿ ಭಾಗದಲ್ಲಿ 112 ಮಿ.ಮೀ ಹಾಗೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ 100.5 ಮಿ.ಮೀ ಮಳೆ ದಾಖಲಾಗಿದೆ.



