ಜೂನ್ 11ರವರೆಗೆ ಭಾರೀ ಮಳೆ ಸಾಧ್ಯತೆ! 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು ಜೂನ್ 11ರವರೆಗೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಿನ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿ ಎಚ್ಚರಿಕೆ ನೀಡಲಾಗಿದೆ.

- ಜೂನ್ 11ರವರೆಗೆ ಭಾರಿ ಮಳೆ ಸಾಧ್ಯತೆ ಇದೆ.
- 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
- ಮಳೆ ಎಚ್ಚರಿಕೆ ಹಿನ್ನೆಲೆ ಜಿಲ್ಲಾಡಳಿತ ಸಜ್ಜಾಗಿದೆ.
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮಳೆ ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ.
ಭಾರೀ ಮಳೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ನಿರಂತರ ಮಳೆಯ ಜೊತೆಗೆ ಕೆಲವೆಡೆ ಅತಿವೃಷ್ಟಿ ಸಂಭವಿಸುವ ಸಾಧ್ಯತೆ ಇರುವುದರಿಂದ ಜನರು ಅಗತ್ಯ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆ ಇರುವ ಕಾರಣ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಬೇಕು. ಬೆಟ್ಟಗುಡ್ಡ ಪ್ರದೇಶಗಳಲ್ಲಿ ಭೂಕುಸಿತದ ಅಪಾಯವೂ ಇರುವುದರಿಂದ ಸ್ಥಳೀಯ ಆಡಳಿತಗಳು ಪರಿಸ್ಥಿತಿಯನ್ನು ನಿಗಾ ವಹಿಸುತ್ತಿವೆ.
ಇದೇ ವೇಳೆ ಕೊಡಗು, ಹಾಸನ, ಹಾವೇರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಭಾಗಗಳಲ್ಲಿ ಕೂಡ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ರೈತರು ಹಾಗೂ ಸಾರ್ವಜನಿಕರು ಹವಾಮಾನ ವರದಿಗಳನ್ನು ಗಮನಿಸುವಂತೆ ಮನವಿ ಮಾಡಲಾಗಿದೆ.
ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಾಗಲಕೋಟೆ, ದಾವಣಗೆರೆ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಶೇಷ ಎಚ್ಚರಿಕೆ ನೀಡಲಾಗಿದ್ದು, ಸ್ಥಳೀಯ ಆಡಳಿತ ಈಗಾಗಲೇ ವಿಪತ್ತು ನಿರ್ವಹಣಾ ತಂಡಗಳನ್ನು ಸಿದ್ಧ ಸ್ಥಿತಿಯಲ್ಲಿ ಇರಿಸಿದೆ. ತುರ್ತು ಸಂದರ್ಭಗಳಲ್ಲಿ ತಕ್ಷಣ ಸ್ಪಂದಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ನದಿ ತೀರ, ಜಲಾಶಯಗಳ ಸುತ್ತಮುತ್ತ ಹಾಗೂ ಅಪಾಯದ ಪ್ರದೇಶಗಳಿಗೆ ಅನಗತ್ಯವಾಗಿ ತೆರಳದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯುವ ಮೊದಲು ಹವಾಮಾನ ಮಾಹಿತಿ ಪರಿಶೀಲಿಸಬೇಕು ಎಂದು ಎಚ್ಚರಿಕೆ ನೀಡಲಾಗಿದೆ.



