ಭೀಕರ ಅಪಘಾತ: ಲಾರಿ ಡಿಕ್ಕಿಗೆ ಸ್ಕೂಟಿ ನಜ್ಜುಗುಜ್ಜು; ಯುವಕ ಸ್ಥಳದಲ್ಲೇ ಸಾವು
ರಾಮನಗರದಲ್ಲಿ ತಡರಾತ್ರಿ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

- ಸ್ಕೂಟಿ-ಲಾರಿ ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು
- ನಿತಿನ್ ಸಾವು; ಸೇವಂತ್‌ಗೆ ಗಂಭೀರ ಗಾಯ
- ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲು
ರಾಮನಗರ ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ ಸೋಮವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) 21 ವರ್ಷದ ಯುವಕ ಮೃತಪಟ್ಟಿದ್ದಾನೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru-Mysuru Expressway) ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ದಾರಾಪುರ ಗ್ರಾಮದ ನಿವಾಸಿ ನಿತಿನ್ (Nithin) ಮೃತಪಟ್ಟ ಸ್ಕೂಟಿ ಸವಾರ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಸೇವಂತ್ (Sevanth) ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಕೆಲಸ ಮುಗಿಸಿಕೊಂಡು ಯುವಕರಿಬ್ಬರೂ ಸ್ಕೂಟಿಯಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಕೆಂಪನಹಳ್ಳಿ ಗೇಟ್ ಸಮೀಪದ ಸರ್ವೀಸ್ ರಸ್ತೆಯಲ್ಲಿ ಎದುರಿನಿಂದ ಬಂದ ಲಾರಿ ಸ್ಕೂಟಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ನಿತಿನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ (Bidadi Police Station) ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



