ಕೋಲಾರ: ಕಾರು ಗ್ಯಾರೇಜ್ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ! 3 ಕಾರುಗಳು ಸುಟ್ಟು ಭಸ್ಮ

ಕೋಲಾರ ಜಿಲ್ಲೆಯ ಬಂಗಾರಪೇಟೆ ಸಮೀಪ ಕಾರು ಸರ್ವಿಸ್ ಕೇಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿ ಮೂರು ಕಾರುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಇನ್ನೆರಡು ವಾಹನಗಳಿಗೆ ಹಾನಿಯಾಗಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಸ್.ಜಿ. ಕೋಟೆ ಸಮೀಪ ಇರುವ ಕಾರು ಸರ್ವಿಸ್ ಕೇಂದ್ರದಲ್ಲಿ ಸಂಭವಿಸಿದ ಅಗ್ನಿ ಅವಘಡ ಭಾರೀ ನಷ್ಟಕ್ಕೆ ಕಾರಣವಾಗಿದೆ. ಮಧ್ಯರಾತ್ರಿ ವೇಳೆ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ವ್ಯಾಪಿಸಿ ಮೂರು ಕಾರುಗಳನ್ನು ಸಂಪೂರ್ಣವಾಗಿ ಸುಟ್ಟುಹಾಕಿದೆ.

ಈರಣ್ಣ ಅವರಿಗೆ ಸೇರಿದ ಚೌಡೇಶ್ವರಿ ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಈ ಘಟನೆ ನಡೆದಿದ್ದು, ಆರಂಭಿಕ ಮಾಹಿತಿ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಗ್ಯಾರೇಜ್ ಒಳಗೆ ನಿಲ್ಲಿಸಿದ್ದ ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿವೆ.

ಇನ್ನೂ ಹೊರಭಾಗದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೂ ಬೆಂಕಿಯ ತಾಪ ತಗುಲಿ ಭಾಗಶಃ ಹಾನಿಯಾಗಿದೆ. ಬೆಂಕಿಯ ತೀವ್ರತೆಗೆ ಸರ್ವಿಸ್ ಕೇಂದ್ರದ ಕೆಲವು ಭಾಗಗಳು ಸಹ ಹಾನಿಗೊಳಗಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಅದೃಷ್ಟವಶಾತ್ ಘಟನೆ ನಡೆದ ಸಮಯದಲ್ಲಿ ಗ್ಯಾರೇಜ್‌ನಲ್ಲಿ ಯಾವುದೇ ಸಿಬ್ಬಂದಿ ಇರಲಿಲ್ಲ. ಇದರಿಂದ ಜೀವಹಾನಿ ಸಂಭವಿಸದೇ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸ್ಥಳೀಯರು ಹೊಗೆ ಹಾಗೂ ಜ್ವಾಲೆಗಳನ್ನು ಗಮನಿಸಿ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಮಾಹಿತಿ ದೊರಕುತ್ತಿದ್ದಂತೆಯೇ ಬಂಗಾರಪೇಟೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

ಅಗ್ನಿ ಅವಘಡದ ನಿಖರ ಕಾರಣ ಪತ್ತೆ ಮಾಡಲು ತನಿಖೆ ಮುಂದುವರಿದಿದ್ದು, ಪ್ರಾಥಮಿಕ ಹಂತದಲ್ಲಿ ವಿದ್ಯುತ್ ದೋಷವೇ ಬೆಂಕಿಗೆ ಕಾರಣ ಎನ್ನಲಾಗುತ್ತಿದೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories